ಖಾಸಗಿ ಬಸ್ಸು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಭವಿಸಿದೆ.
ತಾಲ್ಲೂಕಿನ ವೈ.ಹುಣಸೇನಹಳ್ಳಿ ಬಳಿಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ದ್ವಿಚಕ್ರ ವಾಹನ, ಬಸ್ಸಿನಡಿಯಲ್ಲಿ ಸಿಲುಕಿ ಹಾಳಾಗಿದೆ.
ಚೆನ್ನಹಳ್ಳಿ ನಿವಾಸಿ ಬೈರಪ್ಪ (೫೫) ಗಾಯಗೊಂಡು ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ. ಈ ಭಾಗದಲ್ಲಿ ಖಾಸಗಿ ಬಸ್ಸುಗಳು ವೇಗವಾಗಿ ಸಂಚರಿಸುತ್ತವೆ. ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ರಸ್ತೆಯು ದ್ವಿಚಕ್ರ ವಾಹನ ಸವಾರರಿಗೆ ಮೃತ್ಯುಕೂಪವಾಗಿದೆ. ಇದರಿಂದಲೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಜನರು ಬಸ್ಸಿನ ಗಾಜುಗಳನ್ನು ಹೊಡೆದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.