ಈ ಬಾರಿಯ ಬೇಸಿಗೆಯಲ್ಲಿ ನೀರಿನ ಅಭಾವ ತೀವ್ರವಾಗಲಿದೆ. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಜವಾಬ್ದಾರಿಯಿಂದ ತಮ್ಮ ಮೇಲಿರುವ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಕುಡಿಯುವ ನೀರು ವಿಭಾಗದ ಎಂಜಿನಿಯರ್ ಕೇಶವಮೂರ್ತಿ, ಹಳ್ಳಿಗಳಲ್ಲಿ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸಲಿದೆ. ತಾಲ್ಲೂಕಿನಲ್ಲಿ ೧೮೪ ಹಳ್ಳಿಗಳಲ್ಲಿ ಸಮಸ್ಯೆ ತಲೆದೋರಿರುವ ಬಗ್ಗೆ ಈಗಾಗಲೇ ಗುರ್ತಿಸಲಾಗಿದ್ದು ೯ ಕೋಟಿ ರೂಪಾಯಿಗಳನ್ನು ಅಂದಾಜು ಮಾಡಿ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದೇವೆ. ಹಳ್ಳಿಗಳಲ್ಲಿನ ಸಮಸ್ಯೆಯನ್ನು ನೀಗಿಸಲು ಕೊಳವೆಬಾವಿಗಳು ಬತ್ತಿಹೋಗಿರುವ ಕಡೆಗಳಲ್ಲಿ ರೈತರ ಮನವೊಲಿಸಿ ನೀರು ಪಡೆದುಕೊಂಡು ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಒಂದು ವೇಳೆ ರೈತರು ಕೊಳವೆಬಾವಿಗಳನ್ನು ಬಿಟ್ಟುಕೊಡಲು ನಿರಾಕರಿಸಿದಲ್ಲಿ ಟ್ಯಾಂಕರುಗಳ ಮೂಲಕ ಪೂರೈಕೆ ಮಾಡುವಂತೆ ತಿಳಿಸಿದ್ದು, ಅವರ ಆದೇಶದಂತೆ ಮಾಡುತ್ತಿದ್ದೇವೆ ಎಂದು ಉತ್ತರಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್ ಮಾತನಾಡಿ, ಸರ್ಕಾರದಿಂದ ಬರುವಂತಹ ಅನುದಾನಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು. ಎಲ್ಲಾ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಸತೀಶ್, ತನುಜಾರಘು, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಇ.ಓ.ವೆಂಕಟೇಶ್, ನರೇಗಾ ಯೋಜನಾಧಿಕಾರಿ ಶ್ರೀನಾಥ್, ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -