Home News ಮಳಮಾಚನಹಳ್ಳಿ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಮಳಮಾಚನಹಳ್ಳಿ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ

0

ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆಯ ಮಳಮಾಚನಹಳ್ಳಿ ಶಾಖೆಯ ಸದಸ್ಯರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಶಿಡ್ಲಘಟ್ಟದಿಂದ ಜಂಗಮಕೋಟೆ ಕ್ರಾಸ್ ನಡುವೆ ಮಳಮಾಚನಹಳ್ಳಿ, ತಾದೂರು, ಬಸವಾಪಟ್ಟಣ ಮುಂತಾದ ಗ್ರಾಮಗಳಿಂದ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಆದರೆ ದಿನಕ್ಕೆ ಒಂದು ಬಾರಿ ಮಾತ್ರ ಸರ್ಕಾರಿ ಬಸ್ಸು ಈ ಮಾರ್ಗದಲ್ಲಿ ಸಂಚರಿಸುತ್ತದೆ. ಸಾರಿಗೆ ಅಧಿಕಾರಿಗಳು ಖಾಸಗಿಯವರೊಂದಿಗೆ ಶಾಮೀಲಾಗಿ ಈ ಮಾರ್ಗದಲ್ಲಿ ಬಸ್ಸುಗಳನ್ನು ಬಿಡುತ್ತಿಲ್ಲ. ಇತ್ತ ಪಾಸ್ ಮಾಡಿಸಿರುವ ವಿದ್ಯಾರ್ಥಿಗಳು ಪಾಸ್ ಇದ್ದರೂ ಹೆಚ್ಚು ಹಣವನ್ನು ತೆತ್ತು ಖಾಸಗಿ ಬಸ್ಸು ಹಾಗೂ ಆಟೋಗಳನ್ನು ಅವಲಂಬಿಸಬೇಕಾಗಿದೆ. ಶಾಲಾ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಹೋಗಲಾಗದೇ ತೊಂದರೆಯಾಗುತ್ತಿದೆ. ಹಲವಾರು ಬಾರಿ ಸಾರಿಗೆ ಅಧಿಕಾರಿಗಳಿಗೆ ದೂರು ನೀಡಿದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಇದು ಮುಂದುವರಿದಲ್ಲಿ ಮುಂದೆ ಶಿಡ್ಲಘಟ್ಟದ ವೃತ್ತದಲ್ಲಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಸುಮಾರು ಎರಡು ಗಂಟೆಗಳ ಕಾಲ ಮಳಮಾಚನಹಳ್ಳಿ ಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು ಮತ್ತು ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.