ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರಷ್ಟೇ ಸಾಲದು ಆಗಾಗ್ಗೆ ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಕ್ಷಕರೂ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಮಾತುಕತೆ ನಡೆಸುವ ಮೂಲಕ ಮಕ್ಕಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಅವರನ್ನು ಯಾವ ರೀತಿ ತಿದ್ದಬೇಕು ಎಂಬುದರ ಬಗ್ಗೆ ಚರ್ಚಿಸಬೇಕು ಎಂದು ಮೇಲೂರು ಸಿಆರ್ಪಿ ನಾಗರಾಜ್ ಹೇಳಿದರು.
ತಾಲ್ಲೂಕಿನ ಮಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಪೋಷಕರು ಖಾಸಗಿ ಶಾಲೆಗಳ ಮೇಲಿರುವ ವ್ಯಾಮೋಹ ಬಿಡಬೇಕು. ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಕರಿದ್ದು ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಲೂವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂದರು.
ಇತ್ತೀಚೆಗೆ ಮಕ್ಕಳು ಮೊಬೈಲ್ ಹಾಗು ಟಿವಿ ವೀಕ್ಷಣೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವುದರಿಂದ ಉತ್ತಮ ಶಿಕ್ಷಣ ಪಡೆಯಲು ಆಗುವುದಿಲ್ಲ. ಹಾಗಾಗಿ ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡುವುದು ಸೇರಿದಂತೆ ಟ.ವಿ ವೀಕ್ಷಣೆ ಮಾಡದಂತೆ ಎಚ್ಚರವಹಿಸಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಲ್ಲಿಯೂ ಉತ್ತಮ ಪ್ರತಿಭೆಗಳಿದ್ದು ಸರ್ಕಾರಿ ಶಾಲೆಗಳಲ್ಲಿಯೂ ಖಾಸಗಿ ಶಾಲೆಗಳಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಕೆಲಸವನ್ನು ಸರ್ಕಾರಿ ಶಾಲಾ ಶಿಕ್ಷಕರು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ಏರ್ಪಡಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೆಳೆಯುವಂತಿತ್ತು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ನಂದಕುಮಾರ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುನಿಶಾಮಿರೆಡ್ಡಿ, ಶಿಕ್ಷಕರಾದ ಎಇ.ಎಂ.ಮುನಿರಾಜು, ಮುಖ್ಯಶಿಕ್ಷಕಿ ಶಕುಂತಲಮ್ಮ, ಶಾಲಾಭಿವೃದ್ದಿ ಸಮಿತಿ ಸದಸ್ಯ ನಾರಾಯಣಸ್ವಾಮಿ, ಶಿಕ್ಷಕರಾದ ಕೆ.ಬಿ.ಅರುಣ, ಲೀಲಾವತಿ, ಅಶ್ವತ್ಥನಾರಾಯಣ, ಸೀನಪ್ಪ ಹಾಜರಿದ್ದರು.