ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಭಾನುವಾರ ಶ್ರೀ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ಧನುರ್ಮಾಸ ಹುಣ್ಣಿಮೆಯ ವಿಶೇಷವಾಗಿದೆ.

ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ವಿವಿಧ ಕಲಾತಂಡಗಳೊಂದಿಗೆ ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.
ಶಾಸಕ ಎಂ.ರಾಜಣ್ಣ ರಥೋತ್ಸವಕ್ಕೆ ಚಾಲನೆ ನೀಡಿದರು. ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ತಹಸೀಲ್ದಾರ್ ಎಸ್.ಅಜಿತ್ಕುಮಾರ್ರೈ, ರಾಜಸ್ವ ನಿರೀಕ್ಷಕ ಕೃಷ್ಣಾರೆಡ್ಡಿ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಡಿ.ಎ.ಮಳ್ಳೂರಯ್ಯ, ಮುಖಂಡರಾದ ಆಂಜನೇಯರೆಡ್ಡಿ, ಎ.ವೆಂಕೋಬರಾವ್, ಕೆಂಪಣ್ಣ, ಜಯಚಂದ್ರ, ವಕೀಲರಾದ ತಿಮ್ಮೇಗೌಡ, ನಾರಾಯಣಸ್ವಾಮಿ ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.