ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿನ ಸಮಾಜ ಕಲ್ಯಾಣ ಇಲಾಖೆಯವರು ನಡೆಸುವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶನಿವಾರ ಮತ್ತು ಭಾನುವಾರ ಬೀಗ ಜಡಿದು ಹಾಜರಾತಿ ಹಾಕುವ ಮೂಲಕ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಡಿ.ವೈ.ಎಫ್.ಐ ರಾಜ್ಯ ಮುಖಂಡ ಕುಂದಲಗುರ್ಕಿ ಮುನೀಂದ್ರ ಆರೋಪಿಸಿದ್ದಾರೆ.
ತಾಲ್ಲೂಕು ಕೇಂದ್ರದಿಂದ ದೂರವಿರುವ ಬಶೆಟ್ಟಹಳ್ಳಿ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡದ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ವಿದ್ಯಾರ್ಥಿಗಳನ್ನು ಊರುಗಳಿಗೆ ಕಳಿಸಿ ಬೀಗ ಹಾಕುತ್ತಿದ್ದಾರೆ ಎಂಬ ದೂರುಗಳು ಬರುತ್ತಿದ್ದವು. ಅಲ್ಲಿಗೆ ಭೇಟಿ ನೀಡಿದಾಗ ಬೀಗ ಹಾಕಿರುವುದು ಪ್ರತ್ಯಕ್ಷವಾಗಿ ನೋಡುವಂತಾಯಿತು. ಈ ಬಗ್ಗೆ ವಾರ್ಡನ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಯ ಮೂಲಕ ಪ್ರತಿಭಟಿಸಲಾಗುವುದು ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಲಯದಲ್ಲಿ ಅಳವಡಿಸಲಾದ ನಾಮಫಲಕದಲ್ಲಿ ಹಿಂದೆ ಇದ್ದ ಸಮಾಜ ಕಲ್ಯಾಣ ಸಚಿವರಾದ ಎ.ನಾರಾಯಣಸ್ವಾಮಿ ಅವರ ಹೆಸರಿದೆ. ಹಾಗೇಯೇ ಶಾಸಕರ ಹಾಗೂ ಅಧಿಕಾರಿಗಳ ಹೆಸರುಗಳನ್ನು ತಪ್ಪಾಗಿ ಮುದ್ರಿಸಲಾಗಿದೆ. ಎರಡು ವರ್ಷಗಳ ಹಿಂದಿನ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಹೆಸರನ್ನೇ ಇನ್ನೂ ಉಳಿಸಿಕೊಂಡು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವಂತಿದೆ ಎಂದು ಆರೋಪಿಸಿದರು.
ಲಕ್ಷಾಂತರ ರೂಪಾಯಿಗಳ ಅನುದಾನ ಬಂದಿದ್ದರೂ ಸಹ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಮೂಲಭೂತ ಸೌಕರ್ಯಗಳು ಅವರಿಗೆ ದೊರಕದಂತಾಗಿದೆ. ಕನಿಷ್ಠ ಪಕ್ಷ ವಿದ್ಯಾರ್ಥಿನಿಲಯದ ನಾಮಫಲಕದ ಬರಹವೂ ಬದಲಾಗದಿರುವುದು ಅವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.