ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳಷ್ಟೇ ಅಲ್ಲದೇ ಅಧಿಕಾರಿಗಳು ಹೆಚ್ಚು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟಬೇಕು ಎಂದರು.
ಗ್ರಾಮೀಣ ಪ್ರದೇಶದ ಜನತೆಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಹಾಗಾಗಿ ಕೆಲವೇ ಕೆಲ ಪ್ರಭಾವಿಗಳು ಹಾಗು ಮಧ್ಯವರ್ತಿಗಳ ಮುಖಾಂತರ ಸರ್ಕಾರದ ವಿವಿಧ ಯೋಜನೆಗಳು ಅನರ್ಹರಿಗೆ ಸಿಗುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಬೇಕು ಎಂದರು.
ತಾಲ್ಲೂಕಿನಾಧ್ಯಂತ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ ಮಾಹಿತಿ ನೀಡಿದಲ್ಲಿ ಆಯಾ ಕ್ಷೇತ್ರದ ತಾಲ್ಲೂಕು ಪಂಚಾಯತಿ ಸದಸ್ಯರೂ ಸೇರಿದಂತೆ ನಾವುಗಳು ನೂತನ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಸೂಕ್ತ ಕ್ರಮ ಜರುಗಿಸಲು ಪ್ರಯತ್ನಿಸುವುದಾಗಿ ಹೇಳಿದರು.
ದ್ರಾಕ್ಷಿ, ಮಾವು, ದಾಳಿಂಬೆ, ಆಲೂಗಡ್ಡೆ, ಮುಂತಾದ ಬೆಳೆಗಳನ್ನು ಬೆಳೆಯುವಂತಹ ರೈತರು ವಿಮೆ ಮಾಡಿಸಿದರೆ, ಪ್ರಕೃತಿ ವಿಕೋಪ, ಅನಾವೃಷ್ಟಿಯ, ಆಲಿಕಲ್ಲಿನ ಮಳೆ, ಅಥವಾ, ಬಿರುಗಾಳಿಗೆ ಸಿಲುಕುವಂತಹ ಬೆಳೆಗಳಿಗೆ ವಿಮೆಯನ್ನು ಪಡೆಯಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಸಭೆಗೆ ಮಾಹಿತಿ ನೀಡಿದರು.
ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ನರೇಗಾ, ಬೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳಿಂದ ಸಿಗುವ ವಿವಿಧ ಸವಲತ್ತುಗಳು ಹಾಗು ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಸಭೆಗೆ ಸಲ್ಲಿಸಿದರು.
ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಇಓ ವೆಂಕಟೇಶ್, ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.