ಸರ್ಕಾರದ ಸೌಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸವನ್ನು ಮಾಡಬೇಕು ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ ಹೇಳಿದರು.
ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿನ ಬಹುತೇಕ ರೈತರು ಹಾಗೂ ನಾಗರಿಕರಿಗೆ ಸರ್ಕಾರಿ ಸೌಲತ್ತುಗಳ ಬಗ್ಗೆ ಮಾಹಿತಿಯಿರುವುದಿಲ್ಲ. ಕೆಲವು ಮಂದಿ ಮಧ್ಯವರ್ತಿಗಳ ಮುಖಾಂತರವೇ ಸೌಲಭ್ಯಗಳು ವಿತರಣೆಯಾಗುತ್ತಿರುವುದು ಕೇಳಿ ಬರುತ್ತಿದ್ದು, ಪ್ರತಿಯೊಂದು ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ಥಳೀಯ ಗ್ರಾಮ ಪಂಚಾಯತಿಗಳಲ್ಲಿ ನಡೆಯುವಂತಹ ಗ್ರಾಮಸಭೆಗಳಲ್ಲಿ ಭಾಗವಹಿಸಿ ಜನರಿಗೆ ಮಾಹಿತಿ ನೀಡಬೇಕು. ವಾರ್ಷಿಕವಾಗಿ ನೀಡಿರುವ ನಿರ್ಧಿಷ್ಟವಾದ ಗುರಿಯನ್ನು ಮುಟ್ಟಿ ತಾಲ್ಲೂಕಿಗೆ ಬರುವಂತಹ ಅನುದಾನಗಳು ಸಮರ್ಪಕವಾಗಿ ಸದ್ಬಳಕೆಯಾಗಬೇಕಾದರೆ, ಅಧಿಕಾರಿಗಳ ಸಹಕಾರ ಬಹಳ ಮುಖ್ಯವಾಗಿ ಬೇಕು ಎಂದರು.
ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿರುವ ಸರ್ಕಾರಿ ಶಾಲೆಗಳಲ್ಲಿನ ಟಾಪ್ ೧೦ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಲಾಗುತ್ತದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಗೆ ಸಹಕಾರಿಯಾಗುವಂತೆ ಫೈರ್ ಸೇಪ್ಟಿಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಉಪಾಧ್ಯಕ್ಷ ಎಚ್. ನರಸಿಂಹಯ್ಯ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆಯಿಲ್ಲದೆ, ಆಸ್ಪತ್ರೆಗೆ ಬರುವಂತಹ ರೋಗಿಗಳಿಂದ ಅನೇಕ ದೂರುಗಳು ಕೇಳಿ ಬರುತ್ತಿದ್ದು, ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಆಸ್ಪತ್ರೆಯ ವೈದ್ಯರಿಗೆ ಸಲಹೆ ನೀಡಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮಾತನಾಡಿ, ಜಂಗಮಕೋಟೆ ಹೋಬಳಿಯ ಮೇಲೂರು ಭಾಗದಲ್ಲಿ ಪದೇ ಪದೇ ಆಲಿಕಲ್ಲಿನ ಮಳೆಯಾಗಿ ದ್ರಾಕ್ಷಿ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟವಾಗಿದ್ದು, ತೋಟಗಾರಿಕೆಯ ದ್ರಾಕ್ಷಿ ಬೆಳೆಗಳು ಸೇರಿದಂತೆ ಎಲ್ಲಾ ಬೆಳೆಗಳಿಗೆ ರೈತರು ಬೆಳೆವಿಮೆ ಮಾಡಿಸಿಕೊಳ್ಳಲು ಅವಕಾಶವಿದೆ, ರೈತರು ಶೇ. ೫ ರಷ್ಟು ಮಾತ್ರ ವಿಮೆ ಹಣವನ್ನು ಕಟ್ಟಬೇಕಾಗಿದ್ದು, ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ರೈತರಿಗೆ ಹನಿನೀರಾವರಿಗೆ ಶೇ. ೯೦ ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಎಇಇ ಶಿವಾನಂದ, ಬೆಸ್ಕಾಂ ಇಲಾಖೆ ಎಇಇ ಬೈರೇಗೌಡ, ರೇಷ್ಮೆ ಇಲಾಖೆ ಸಹಾಯಕ ನಿರ್ದೆಶಕ ಎಂ.ಸಿ.ಚಂದ್ರಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಸಿ.ದೇವೇಗೌಡ, ಕೈಗಾರಿಕೆ ಇಲಾಖೆಯ ಶಾಜೀಯಾಖಾನಮ್ ಮೊದಲಾದ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.