ಗ್ರಾಮೀಣ ಭಾಗದಲ್ಲಿ ಸರ್ಕಾರಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಅಗತ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ನೆರವಾಗುವುದಾಗಿ ಎಸ್.ಎನ್. ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ಪಿಂಚಣಿ ಶಿಬಿರ, ಹಿರಿಯ ನಾಗರಿಕರ ಗುರುತಿನ ಚೀಟಿ ಹಾಗೂ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳ ಜನರಿಗೆ ವಿವಿಧ ಸರ್ಕಾರಿ ಯೋಜನೆಗಳಲ್ಲಿ ಫಲಾನುಭವಿಗಳಾಗಲು ಬೇಕಾದ ದಾಖಲೆ, ಅಫಿಡವಿಟ್ಟುಗಳನ್ನು ಮಾಡಿಸಲು ನೆರವಾಗುತ್ತೇವೆ. ಆರೋಗ್ಯ ಸಂಬಂಧಿ ತೊಂದರೆಗಳನ್ನು ನಿವಾರಿಸಿಕೊಳ್ಳಲು ನೆರವಾಗುತ್ತೇವೆ. ಹಿರಿಯ ನಾಗರಿಕರಿಗೆ ಮಾಸಾಶನ, ವಿಧವಾ ವೇತನ, ಅಂಗವಿಕಲರ ಮಾಸಾಶನ, ಹಿರಿಯ ನಾಗರಿಕರಿಗೆ ಗುರುತಿನ ಚೀಟಿ, ಕಾರ್ಮಿಕರ ವಿಮಾ ಯೋಜನೆ, ಚಾಲಕರ ವಿಮಾ ಯೋಜನೆ, ಮನಸ್ವಿನಿ ಮಾಸಾಶನವನ್ನು ಪಡೆಯಲು ಸೂಕ್ತ ದಾಖಲೆಗಳನ್ನು ಒಟ್ಟುಮಾಡಿಕೊಳ್ಳಲು ನಮ್ಮ ಎಸ್ಎನ್ ಕ್ರಿಯಾ ಟ್ರಸ್ಟ್ ಸದಸ್ಯರು ಸಹಕರಿಸಲಿದ್ದಾರೆ ಎಂದರು.
ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು. ದೃಷ್ಟಿ ಆಸ್ಪತ್ರೆಯ ವೈದ್ಯರು ಕಣ್ಣಿನ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ಮತ್ತು ಕನ್ನಡಕಗಳನ್ನು ಉಚಿತವಾಗಿ ನೀಡಿದರು. ಶಸ್ತ್ರಚಿಕಿತ್ಸೆ ಅಗತ್ಯವಿರುವವರಿಗೆ ಉಚಿತವಾಗಿ ಕರೆದೊಯ್ದು ದೃಷ್ಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸುವುದಾಗಿ ತಿಳಿಸಿದರು.
ಗಂಜಿಗುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷ ಪಿ.ಆನಂದರೆಡ್ಡಿ, ಸದಸ್ಯರಾದ ಜಿ.ನರಸಿಂಹಮೂರ್ತಿ, ವೆಂಕಟಮ್ಮ, ಎನ್.ನರಸಿಂಹಮೂರ್ತಿ, ಎಂಪಿಸಿಎಸ್ ನಿರ್ದೇಶಕ ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.