Home News ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಆದ್ಯತೆ ನೀಡಿ

ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಆದ್ಯತೆ ನೀಡಿ

0

ಹಾಲು ಉತ್ಪಾದಕರು ಹೈನುಗಾರಿಕೆಯಲ್ಲಿ ವೈಜ್ಞಾನಿಕ ಕ್ರಮಗಳನ್ನು ಅನುಸರಿಸುವ ಮೂಲಕ ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಗಮನ ಹರಿಸಬೇಕು. ನಿಗದಿಪಡಿಸಿರುವ ಫ್ಯಾಟ್‌ ಅಂಶವಿದ್ದಲ್ಲಿ ಮಾತ್ರ ಸರ್ಕಾರದ ಪ್ರೋತ್ಸಾಹ ಧನ ಸಿಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಸೀತಹಳ್ಳಿ ಗ್ರಾಮದಲ್ಲಿ ಬುಧವಾರ ಸೀತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ತರಕಾರಿ, ಹೈನುಗಾರಿಕೆಯನ್ನು ಜನರು ಹೆಚ್ಚಾಗಿ ಅವಲಂಬಿತರು. ಮಹಿಳೆಯರು ಸಹ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುಟ್ಟ ಗ್ರಾಮವಾದರೂ ದಿನಕ್ಕೆ 500 ಲೀಟರ್‌ ಹಾಲಿನ ಉತ್ಪಾದನೆ ಸಣ್ಣ ಮಾತಲ್ಲ. ಸರ್ಕಾರದ ಹಾಗೂ ಸಹಕಾರ ಸಂಘದ ಅನುಕೂಲಗಳನ್ನು ಪಡೆದು ಹೈನುಗಾರಿಕೆಯಿಂದ ಆರ್ಥಿಕವಾಗಿ ಸಬಲರಾಗಬೇಕು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉತ್ಪಾದನೆಯಾದ ಹಾಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸರಬರಾಜಾಗುತ್ತಿದೆ. ನಮ್ಮ ಸೇನೆಗೂ ಸಹ ಕಳುಹಿಸಲಾಗುತ್ತಿದೆ. ನಮ್ಮ ರೈತರ ಕಷ್ಟಕ್ಕೆ ತಕ್ಕ ಪ್ರತಿಫಲವಿದೆ ಎಂದು ಹೇಳಿದರು.
ಕೋಚಿಮುಲ್‌ ನಿರ್ದೇಶಕ ಬಂಕ್‌ ಮುನಿಯಪ್ಪ ಮಾತನಾಡಿ, ಹಾಲು ಒಕ್ಕೂಟದಿಂದ ಸಿಗುವಂತಹ ಎಲ್ಲಾ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡು ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆಗೆ ಇನ್ನೂ ಹೆಚ್ಚು ಒತ್ತು ನೀಡಬೇಕು. ಉತ್ಪಾದಕರ ಶ್ರೇಯೋಭಿವೃದ್ಧಿ, ಹಾಲು ಉತ್ಪಾದಕರ ಮಕ್ಕಳ ಶಿಕ್ಷಣ, ಬೆಂಬಲ ಬೆಲೆಗಳ ಮುಖಾಂತರ ಹಾಲು ಉತ್ಪಾದಕರಿಗೆ ಒಕ್ಕೂಟ ಉತ್ತೇಜಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸೀತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಿರಿಯರನ್ನು ಗೌರವಿಸಲಾಯಿತು.
ಸೀತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಲಿಂಗಾರೆಡ್ಡಿ, ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಮುಖಂಡ ಮೇಲೂರು ಬಿ.ಎನ್‌.ರವಿಕುಮಾರ್‌, ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಜಯರಾಮರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಕೋಚಿಮುಲ್‌ ವಿಸ್ತರಣಾಧಿಕಾರಿ ಉಮೇಶ್‌ರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿ.ಶಿವಾರೆಡ್ಡಿ, ಬೋವಿ ಸಂಘದ ಅಧ್ಯಕ್ಷ ಚಿಕ್ಕನರಸಿಂಹಪ್ಪ, ಅಶ್ವತ್ಥರೆಡ್ಡಿ, ಚಿಕ್ಕನರಸಿಂಹಪ್ಪ, ಮುನಿರಾಮಪ್ಪ, ಬೈರಪ್ಪ, ವೆಂಕಟೇಶಪ್ಪ, ಅಶ್ವತ್ಥರೆಡ್ಡಿ, ಚಂದ್ರೇಗೌಡ ಮತ್ತಿತರರು ಹಾಜರಿದ್ದರು.