ಕನ್ನಡಪರ ಕಾರ್ಯಕ್ರಮಗಳನ್ನು ನಾಡಿನಾದ್ಯಂತ ಹಮ್ಮಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು ತಿಳಿಸಿದರು.
ನಗರದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಸದಸ್ಯರು, ಸರ್ಕಾರಿ ನೌಕರರ ಸಂಘದ ಸದಸ್ಯರ ಸಮ್ಮುಖದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಯಾದ ಅವರು ಗುರುವಾರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತೇನೆ. ನಾಡಿನಾದ್ಯಂತ ಕನ್ನಡಪರ ಸಂಘಟನೆಗಳೊಂದಿಗೆ ಸಂಪರ್ಕವಿಟ್ಟುಕೊಂಡು ಎಲ್ಲರ ಸಲಹೆ, ಸೂಚನೆ, ಮಾರ್ಗದರ್ಶನಗಳನ್ನು ಗೌರವದಿಂದ ಸ್ವೀಕರಿಸುತ್ತಾ ಕನ್ನಡತನವನ್ನು ನಾಡಿನಾದ್ಯಂತ ಬೆಳೆಸುವ ಕೈಂಕರ್ಯವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಪ್ರತಿಯೊಂದು ತಾಲ್ಲೂಕು ಕೇಂದ್ರಗಳಲ್ಲೂ ತೆರಳಿ ಕನ್ನಡ ಪರ ಸಂಘಟನೆಗಳ ಸದಸ್ಯರು ನೀಡುವ ಅಮೂಲ್ಯ ಸಲಹೆಗಳನ್ನು ಪಡೆದು ಕನ್ನಡದ ಕೆಲಸಕ್ಕೆ ಮುಂದುವರಿಯುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಸದಸ್ಯರು ಮತ್ತು ಸರ್ಕಾರಿ ನೌಕರರ ಸಂಘದ ಸದಸ್ಯರು ಪಟೇಲ್ ಪಾಂಡು ಅವರನ್ನು ಸನ್ಮಾನಿಸಿದರು.
ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾಧ್ಯಕ್ಷ ವಾಸುದೇವರಾವ್, ವಿ.ಕೃಷ್ಣಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಕಾರ್ಯದರ್ಶಿ ಅಕ್ಕಲರೆಡ್ಡಿ, ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ಎಸ್.ವಿ.ನಾಗರಾಜರಾವ್, ಶ್ಯಾಮಸುಂದರ್, ಕ್ರೆಸೆಂಟ್ ವಿದ್ಯಾಸಂಸ್ಥೆ ಕಾರ್ಯದರ್ಶಿ ತಮೀಮ್ ಅನ್ಸಾರಿ, ಭಾಸ್ಕರ್, ಕೆಂಪಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.