Home News ಕಸಾಪದಿಂದ ಕುವೆಂಪು ಕುರಿತು ಪ್ರಬಂಧ ಸ್ಪರ್ಧೆ

ಕಸಾಪದಿಂದ ಕುವೆಂಪು ಕುರಿತು ಪ್ರಬಂಧ ಸ್ಪರ್ಧೆ

0

ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಸಾಪ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಕುವೆಂಪು ಜನ್ಮದಿನದ ಅಂಗವಾಗಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕವಿ. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು. ಹುಟ್ಟುವಾಗ ವಿಶ್ವಮಾನವನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅಂದರೆ ವಿಶ್ವಮಾನವನನ್ನಾಗಿ, ಪರಿವರ್ತಿಸುವುದೆ ನಮ್ಮ ವಿದ್ಯೆ, ಸಂಸ್ಕೃತಿ, ನಾಗರಿಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಲೋಕ ಉಳಿದು, ಬಾಳಿ ಬದುಕಬೇಕಾದರೆ ಪ್ರಪಂಚದ ಮಕ್ಕಳೆಲ್ಲ ’ಅನಿಕೇತನ’ರಾಗಬೇಕು ಎಂಬುದು ಅವರ ಆಶಯವಾಗಿತ್ತು ಎಂದು ವಿವರಿಸಿದರು.
ಕುವೆಂಪು ಅವರ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಏಳನೇ ವರ್ಗದ ಎಚ್‌.ಕೆ.ಮದನ್‌ಕುಮಾರ್‌, ಎಚ್‌.ಎ.ಅರ್ಚನ, ಎಚ್‌.ಪಿ.ಮುತ್ತುಶ್ರೀ ಮತ್ತು ಎಂಟನೇ ವರ್ಗದ ಎಚ್‌.ಕೆ.ಮನೋಜ್‌ಕುಮಾರ್‌, ಜಿ.ಪಿ.ದೀಪ, ಎಚ್‌.ಎಂ.ಸ್ವಾತಿ ಅವರಿಗೆ ಕಸಾಪ ತಾಲ್ಲೂಕು ಘಟಕದಿಂದ ಪ್ರಶಸ್ತಿಪತ್ರ ಮತ್ತು ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಜನಪದ ಕಲಾವಿದ ದೇವರಮಳ್ಳೂರು ಮಹೇಶ್‌ ಕುವೆಂಪು ರಚಿಸಿರುವ ಗೀತೆಗಳನ್ನು ಹಾಡಿದರು.
ಕಸಾಪ ತಾಲ್ಲೂಕು ಘಟಕದ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್‌, ಮುಖಂಡ ಹೊಸಪೇಟೆ ಎಚ್‌.ಜಿ.ಶಶಿಕುಮಾರ್‌, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎನ್‌.ಪಾಪಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಎಚ್‌.ಪಿ.ಬಸಪ್ಪ, ಚನ್ನಕೃಷ್ಣಪ್ಪ, ಜಣಗಮಕೋಟೆ ಮಂಜುನಾಥಗೌಡ, ಮುನೇಗೌಡ, ಮುಖ್ಯಶಿಕ್ಷಕಿ ಜಿ.ಎನ್‌.ನೇತ್ರಾವತಿ, ಶಿಕ್ಷಕರಾದ ರೇಖಾರಾಣಿ, ಪದ್ಮಜಾ, ಶೈಲಜಾ, ನಾಗಮಣಿ ಮತ್ತಿತರರು ಹಾಜರಿದ್ದರು.