ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಚ್ಚಾಟಗಳಿಂದ ಮುಂದಿನ ದಿನಗಳಲ್ಲಿ ಹೀನಾಯವಾಗಿ ಸೋಲುವುದರೊಂದಿಗೆ ರಾಜ್ಯದಲ್ಲಿ ೨೫ ಸ್ಥಾನಗಳಿಗೆ ಇಳಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಬಿಜೆಪಿ ಕಛೇರಿಯಲ್ಲಿ ಭಾನುವಾರ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿನ ಸಭೆ ಸಮಾರಂಭಗಳಲ್ಲಿ ತಮ್ಮ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದಾರೆ. ಸ್ಥಳೀಯ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಚ್ಚಾಟಗಳು ಹಾಗೂ ಜೆಡಿಎಸ್ ಪಕ್ಷದ ಗೊಂದಲದ ವಾತಾವರಣದಿಂದಾಗಿ ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಮೇಗೌಡ ಗೆಲವು ಸಾಧಿಸುತ್ತಾರೆ ಎಂದರು.
ಇದೇ ಡಿದೆಂಬರ್ ೨೭ ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಮತದಾನ ಮಾಡುವಂತಹ ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಬಿಜೆಪಿ ಕಾರ್ಯಕರ್ತರು ಅವರ ಮನವೊಲಿಸುವುದರೊಂದಿಗೆ ಬಿಜೆಪಿ ಪಕ್ಷದ ಅಧಿಕಾರಾವಧಿಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿರುವ ಗೊಂದಲವನ್ನು ಬಿಜೆಪಿ ಮತಗಳಾಗಿ ಪರಿವರ್ತನೆ ಮಾಡಬೇಕು ಎಂದರು.
ಬಿಜೆಪಿ ಪಕ್ಷದ ಅಭ್ಯರ್ಥಿ ರಾಮೇಗೌಡ ಮಾತನಾಡಿ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ. ಕಳೆದ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ್ದ ವಿಧಾನ ಪರಿಷತ್ ಸದಸ್ಯರು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ಈ ಬಾರಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಸದಸ್ಯರ ಮನವೊಲಿಸಿ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿಗೆ ನೀಡುವಂತೆ ಮನವೊಲಿಸಬೇಕು ಎಂದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಬಿಜೆಪಿ ಪಕ್ಷದ ರಮೇಶ್ಬಾಯಿರಿ, ಬಳುವನಹಳ್ಳಿ ಶ್ರೀಧರ್, ನಗರಸಭೆ ಸದಸ್ಯ ಎಸ್.ರಾಘವೇಂದ್ರ, ಸಿ.ವಿ.ಲೊಕೇಶ್ಗೌಡ, ಶ್ರೀರಾಮರೆಡ್ಡಿ, ನಂದೀಶ್, ಶಿವಕುಮಾರ್ಗೌಡ, ದಾಮೋದರ್, ಜೆ.ವಿ.ಸದಾಶಿವ, ಎ.ಎಂ.ತ್ಯಾಗರಾಜ್, ಸುಜಾತಮ್ಮ, ಮುನಿರತ್ನಮ್ಮ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -