ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯು ಯಶಸ್ವಿಯಾಗಲು ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಗುಣಮಟ್ಟದಲ್ಲಿ ಸ್ಥಳೀಯ ಗ್ರಾಮಸ್ಥರು ರಾಜಿಯಾಗಬಾರದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಪಲಿಚೇರ್ಲು ಹಾಗೂ ಕನ್ನಪ್ಪನಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ಹಾಗು ಎತ್ತಿನಹೊಳೆ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಉಪೇಕ್ಷಿಸದೆ ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಎಲ್ಲಾ ಗ್ರಾಮಸ್ಥರು ಬೆಳೆಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸಹಕರಿಸಬೇಕು ಎಂದರು.
ತಾಲ್ಲೂಕಿನ ಕನ್ನಪ್ಪನಹಳ್ಳಿ ಗ್ರಾಮದ ಬಳಿಯಿರುವ ಈಚಲುಕೆರೆ ಕೋಡಿ ಹಾಳಾಗಿದ್ದು ಇದನ್ನು ನೂತನವಾಗಿ ನಿರ್ಮಿಸಿಕೊಡಬೇಕು ಎಂಬ ಈ ಭಾಗದ ಜನರ ಬೇಡಿಕೆಯಂತೆ ಸಣ್ಣ ನೀರಾವರಿ ಇಲಾಖೆಯ ಸುಮಾರು ೫೦ ಲಕ್ಷ ರೂ ವೆಚ್ಚದಲ್ಲಿ ಕೋಡಿ ನಿರ್ಮಾಣ ಕಾರ್ಯ ಸೇರಿದಂತೆ ಪಲಿಚೇರ್ಲು ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯಡಿ ಸುಮಾರು ೧೨ ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಇಂದು ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದರು.
ತಾಲ್ಲೂಕಿನಾದ್ಯಂತ ಇನ್ನೂ ಬಹಳಷ್ಟು ಅಭಿವೃದ್ಧಿಯ ಕೆಲಸಗಳು ಆಗಬೇಕಾಗಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನದ ಲಭ್ಯತೆಯ ಮೇರೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಲಕ್ಷ್ಮಿನಾರಾಯಣ, ಗುಮ್ಮರೆಡ್ಡಿ, ವೆಂಕಟೆಶಪ್ಪ, ಮುನಿರಾಜು, ಗಂಗಾಧರ್, ಶ್ರೀನಿವಾಸ್, ಜಯರಾಮರೆಡ್ಡಿ, ಸೀತಪ್ಪ, ಶಿವಾರೆಡ್ಡಿ, ಹೇಮಂತ್ಕುಮಾರ್ ಹಾಜರಿದ್ದರು.