ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶ ನೀಡದಂತೆ ಕಾರ್ಯದರ್ಶಿಗಳು ಎಚ್ಚರವಹಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗೇಟ್‌ನ ಬಳಿಯಿರುವ ಗುಟ್ಟಾಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರ ಸಹಕಾರ ಸಂಘಗಳು ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಕೆಲಸ ಮಾಡುವಂತಹ ಸಿಬ್ಬಂದಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ ಹಾಲಿನ ಗುಣಮಟ್ಟ ಕಾಪಾಡಬೇಕು. ರೇಷ್ಮೆ ಮತ್ತು ಹೈನುಗಾರಿಕೆಗೆ ಹೆಸರುವಾಸಿಯಾಗಿರುವ ಬಯಲು ಸೀಮೆಯ ಕೋಲಾರ-–ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಈಗಾಗಲೇ ನೀರಿನ ಕೊರತೆಯಿಂದಾಗಿ ರೇಷ್ಮೆ ಬೆಳೆಯು ಕುಸಿಯುತ್ತಿದ್ದು ಉಳಿದಿರುವ ಏಕೈಕ ದಾರಿ ಹೈನುಗಾರಿಕೆಯಾದ್ದರಿಂದ ಈ ಉದ್ಯಮವನ್ನು ಎಲ್ಲರ ಸಹಕಾರದಿಂದ ಉಳಿಸಿಕೊಂಡು ಹೋಗಬೇಕಾದಂತಹ ಜವಾಬ್ದಾರಿ ಪ್ರತಿಯೊಬ್ಬರಿಗೂ ಇದೆ. ಕಳೆದ ಎರಡು ದಶಕಗಳಿಂದ ವಿವಿಧ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಅನುಭವ ಹೊಂದಿದ್ದು ಕೋಚಿಮುಲ್‌ನ ನಿರ್ದೇಶಕನಾಗಿ ನನ್ನ ಅಧಿಕಾರಾವಧಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಯಾವುದೇ ರಾಜಕೀಯ ಬೆರೆಸದೇ ಹಾಲು ಉತ್ಪಾದನೆ ಹಾಗು ಗುಣಮಟ್ಟ ಕಾಪಾಡಲು ಶ್ರಮಿಸುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ರಾಜಣ್ಣ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ನಾವು ಬೇರೆ ರಾಷ್ಟ್ರದೊಂದಿಗೆ ಸ್ಪರ್ಧೆ ಮಾಡಬೇಕಾದರೆ ಉತ್ಪಾದನೆಯ ಜೊತೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಹಾಲಿ ಉತ್ಪಾದನೆಯ ಜೊತೆಗೆ ಗುಣಮಟ್ಟ ಕಾಪಾಡಲು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರೂ ಸೇರಿದಂತೆ ಕಾರ್ಯದರ್ಶಿಗಳು ಕರ್ತವ್ಯ ನಿರ್ವಹಿಸಬೇಕು. ಬಯಲುಸೀಮೆ ಭಾಗವಾದ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದ್ದು ನೀರಾವರಿ ಯೋಜನೆಗಾಗಿ ಈ ಭಾಗದ ಎಲ್ಲಾ ಶಾಸಕರು ಸರ್ಕಾರದ ಮೇಲೆ ಒತ್ತಡ ತರಲು ಸಿದ್ದವಾಗಿದ್ದು ಈ ಬಗ್ಗೆ ಯಾರೂ ಸಂಶಯಪಡಬಾರದು ಎಂದರು.
ಈಗಾಗಲೇ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಮೆಗಾ ಡೈರಿಯನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹಾಲಿನಪುಡಿ ತಯಾರಿಸುವ ಘಟಕ ನಿರ್ಮಿಸಲು ಕೋಚಿಮುಲ್ ಮಂಡಳಿ ಮುಂದೆ ಬಂದರೆ ಅದಕ್ಕೆ ಅಗತ್ಯವಿರುವ ಜಾಗ ಒದಗಿಸಿಕೊಡುವುದರೊಂದಿಗೆ ತಾಲ್ಲೂಕಿನ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ಉದ್ಯೋಗ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಮೃತಪಟ್ಟ ರಾಸುಗಳ ವಿಮೆಯ ಚೆಕ್ಕುಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ಚಿಕ್ಕಬಳ್ಳಾಪುರದ ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ಚಿಂತಾಮಣಿಯ ನಿರ್ದೇಶಕ ಊಲವಾಡಿ ಅಶ್ವಥ್ಥನಾರಾಯಣಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಶಿವಾರೆಡ್ಡಿ, ಪುರಸಭೆ ಸದಸ್ಯರಾದ ಅಪ್ಸರ್‌ಪಾಷ, ಎಸ್.ರಾಘವೇಂದ್ರ, ನಂದುಕಿಶನ್, ಕೆ.ಎಂ.ವೆಂಕಟೇಶ್, ಆರ್.ಎ.ಉಮೇಶ್, ಗೋವಿಂದರಾಜು ಮುನಿವೆಂಕಟಸ್ವಾಮಿ, ಒಕ್ಕೂಟದ ಉಪವ್ಯವಸ್ಥಾಪಕ ಈಶ್ವರಯ್ಯ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -