Home News ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

0

ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಮತ್ತು ನಾಗರಿಕರು ಸಹಕರಿಸಿದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯತಿ ಆವರಣದಲ್ಲಿ ಶನಿವಾರ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿವಿಧ ಮಂತ್ರಿಗಳು ಸೇರಿದಂತೆ ಅಧಿಕಾರಿಗಳ ಬಳಿ ಓಡಾಡಿ ಕ್ಷೇತ್ರಕ್ಕೆ ಅಗತ್ಯವಿರುವ ಅನುದಾನಗಳನ್ನು ತಂದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ತಮ್ಮ ಅವಧಿಯಲ್ಲಿ ಮಾಡಲಾಗುತ್ತಿದೆ. ಇನ್ನೂ ಸಾಕಷ್ಟು ಕಾಮಗಾರಿಗಳು ಮಾಡುವುದಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಮಾಡಲು ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.
ಮುಖಂಡ ಬಿ.ಟಿ.ರವಿಕುಮಾರ್ ಮಾತನಾಡಿ ಗ್ರಾಮೀಣ ಭಾಗದ ಜನರ ಏಳಿಗೆಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುವಂತಹ ಕೆಲಸವನ್ನು ಗ್ರಾಮ ಪಂಚಾಯ ಅಧಿಕಾರಿಗಳು ಹಾಗು ಚುನಾಯಿತ ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದರು.
ತಾಲ್ಲೂಕು ಪಂಚಾಯತಿ ಸದಸ್ಯರಾದ ಶೋಭ ಶಶಿಕುಮಾರ್, ಮುನಿಯಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷೆ ಉಮಾರವಿಕುಮಾರ್, ಉಪಾದ್ಯಕ್ಷೆ ಶಾಂತಮ್ಮವೆಂಕಟಪ್ಪ, ತಾಲ್ಲೂಕು ಪಂಚಾಯತಿ ಇಓ ವೆಂಕಟೇಶ್, ಜಿಲ್ಲಾ ಪಂಚಾಯತ್ ಎಇಇ ಶಿವಾನಂದ, ಗ್ರಾಮ ಪಂಚಾಯತಿ ಪಿ.ಡಿ.ಓ ಎಂ.ಕೆ.ಕಾತ್ಯಾಯಿನಿ, ಸದಸ್ಯರು ಹಾಜರಿದ್ದರು.