Home News ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲಲ್ಯ ಸ್ವಚ್ಛತಾ ಸಪ್ತಾಹ

ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲಲ್ಯ ಸ್ವಚ್ಛತಾ ಸಪ್ತಾಹ

0

ಪ್ರತಿಯೊಬ್ಬ ನಾಗರೀಕರು ತಮ್ಮ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡುವ ಜೊತೆಗೆ ನೀರಿನ ಮಿತಬಳಕೆಯನ್ನು ಮಾಡಿಕೊಂಡು ಬೇಸಿಗೆಯಲ್ಲಿ ನೀರಿನ ಸಮಸ್ಯೆಯನ್ನು ಎದುರಿಸಲು ಸಜ್ಜಾಗಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಮುನಿರತ್ನಮ್ಮ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲಲ್ಯ ಸ್ವಚ್ಛತಾ ಸಪ್ತಾಹ ಆಚರಣೆಯ ಅಂಗವಾಗಿ ಅವರು ಮಾತನಾಡಿದರು.
ಬೇಸಿಗೆ ಸಮೀಪಿಸುತ್ತಿದ್ದು ಜನರು ಸೇರಿದಂತೆ ಜಾನುವಾರುಗಳು ಕುಡಿಯುವ ನೀರಿನ ಸಮಸ್ಯೆಗೆ ಒಳಗಾಗುತ್ತಿದ್ದು, ಕೊಳವೆಬಾವಿಗಳಲ್ಲಿ ಲಭ್ಯವಿರುವ ನೀರನ್ನು ವ್ಯರ್ಥಮಾಡದೆ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ರಾಜ್ಯಾಧ್ಯಂತ ಎಚ್೧ಎನ್೧ ಖಾಯಿಲೆ ಸಹಾ ಕಾಣಿಸಿಕೊಂಡು ಅನೇಕ ಮಂದಿ ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಿದ್ದು, ಆಶಾ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸಬೇಕು, ಮನೆಗಳ ಸಮೀಪದಲ್ಲಿ ಸ್ವಚ್ಛವಾಗಿಟ್ಟುಕೊಳ್ಳುವಂತೆ ಅವರಿಗೆ ತಿಳುವಳಿಕೆ ಹೇಳಬೇಕು, ನೀರನ್ನು ಹೆಚ್ಚು ಕಾಲ ಶೇಖರಣೆ ಮಾಡಿ ಇಡದಂತೆ ಮನವರಿಕೆ ಮಾಡಿಕೊಡಬೇಕು ಎಂದರು.
ಸ್ವಚ್ಚತೆಯ ಬಗ್ಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಂದ ಮೆರವಣಿಗೆ ಮುಖಾಂತರ ಜಾಗೃತಿ ಮೂಡಿಸಲಾಯಿತು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ವಿ.ಸಿದ್ದಣ್ಣ, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ಶಾಲೆಗಳ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.