ತಾಲ್ಲೂಕಿನ ಜಯಂತಿ ಗ್ರಾಮದಲ್ಲಿ ಕೆಲ ಮನೆಗಳ ಮೇಲೆ ಹಾದು ಹೋಗಿರುವ ಹೈಟೆನ್ಶನ್ ವಿದ್ಯುತ್ ತಂತಿಗಳಿಂದ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು ತಕ್ಷಣ ಅವುಗಳನ್ನು ತೆರವುಗೊಳಿಸಬೇಕೆಂದು ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಬುಧವಾರ ಒತ್ತಾಯಿಸಿ ಬೆಸ್ಕಾಂ ಕಾರ್ಯನಿರ್ವಾಹಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದರು.
ಹನ್ನೊಂದು ಕಿಲೋ ವ್ಯಾಟ್ ಹೈಟೆನ್ಶನ್ ವಿದ್ಯುತ್ ತಂತಿಗಳು ಮನೆಗಳ ಮೇಲೆ ಹಾದು ಹೋಗಿರುವುದರಿಂದ ಇಲ್ಲಿ ವಾಸಿಸುವವರು ಭಯದಿಂದ ಬದುಕುವಂತಾಗಿದೆ. ಹಿಂದೆ ಹನ್ನೆರಡು ವರ್ಷದ ಬಾಲಕ ವಿದ್ಯುತ್ ತಂತಿ ತಗುಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ರೈತರು ಬೆಸ್ಕಾ ಕಚೇರಿಯ ಮುಂದೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಬೆಸ್ಕಾಂ ಕಾರ್ಯನಿರ್ವಾಹಣಾಧಿಕಾರಿ ಅನ್ಸರ್ ಪಾಷ ಅವರನ್ನು ಸ್ಥಳಕ್ಕೆ ಕರೆಸಿ ಅಲ್ಲಿನ ಸಮಸ್ಯೆಯನ್ನು ವಿವರಿಸಿ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆಯನ್ನು ತಿಳಿಸಿದರು.
ಸ್ಥಳ ಪರಿಶೀಲನೆ ನಡೆಸಿದ ಬೆಸ್ಕಾಂ ಕಾರ್ಯನಿರ್ವಾಹಣಾಧಿಕಾರಿ ಅನ್ಸರ್ ಪಾಷ ರೈತರಿಂದ ಮನವಿಯನ್ನು ಸ್ವೀಕರಿಸಿ ಶೀಘ್ರವೇ ಕಂಬಗಳನ್ನು ಬದಲಾಯಿಸಿ ಹೈಟೆನ್ಶನ್ ವಿದ್ಯುತ್ ತಂತಿಗಳು ಮನೆಗಳಿಂದ ದೂರ ಹಾಕಿಸುವುದಾಗಿ ಭರವಸೆ ನೀಡಿದರು.
ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮುನಿನಂಜಪ್ಪ, ಕೃಷ್ಣಪ್ಪ, ಯಲುವಳ್ಳಿ ಸೊಣ್ಣೇಗೌಡ, ಮಂಜುನಾಥ, ಮಳಮಾಚನಹಳ್ಳಿ ದೇವರಾಜ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.