ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಬುಧವಾರ ಡಿ.ವೈ.ಎಫ್.ಐ ನೇತೃತ್ವದಲ್ಲಿ ಆಸ್ಪತ್ರೆಯ ಮುಂದೆ ಪ್ರತಿಭಟಿಸಲಾಯಿತು.
ಪಟ್ಟಣ ಸೇರಿದಂತೆ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕಟ್ಟಡ ಕುಸಿಯುವಂತಿದೆ. 1970ರಲ್ಲಿ ನಿರ್ಮಿಸಿರುವ ಹಳೆಯ ಕಟ್ಟಡದ ಮೇಲೆ ಹೊಸ ಕಟ್ಟಡವನ್ನು ನಿರ್ಮಿಸುತ್ತಿರುವುದು ಖಂಡನೀಯ. ಇದರ ಬಗ್ಗೆ ಶಾಸಕರೊಂದಿಗೆ ಚರ್ಚಿಸಿದ್ದರೂ ಸಹಾ ಯಾವುದೇ ಪ್ರಯೋಜನವಾಗದಿರುವುದು ದುರಂತದ ಸಂಗತಿಯಾಗಿದೆ. ಪ್ರತಿ ದಿನ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ನೂರಾರು ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿರುತ್ತಾರೆ. ಒಂದು ವೇಳೆ ಆಸ್ಪತ್ರೆಯ ಕಟ್ಟಡ ಕುಸಿದು ಪ್ರಾಣಾಪಾಯವಾದಲ್ಲಿ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಆರೋಪಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಮಳೆ ನೀರು ಸೋರಿ ವಾರ್ಡುಗಳಲ್ಲಿ ನೀರು ತುಂಬಿದ್ದು ಸ್ವಚ್ಛತೆಯಿಲ್ಲದಂತಾಗಿದೆ. ಕುಡಿಯುವ ನೀರಿಲ್ಲದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ತಾಲ್ಲೂಕಿನ ಆಸ್ಪತ್ರೆಗಳಲ್ಲಿ ಖಾಲಿ ಇರುವ 130 ಸಿಬ್ಬಂದಿಯನ್ನು ನೇಮಿಸಬೇಕು. ಶಿಥಿಲ ವ್ಯವಸ್ಥೆಯಲ್ಲಿರುವ ಕಟ್ಟಡವನ್ನು ತಕ್ಷಣವೇ ಸರಿಪಡಿಸಬೇಕು. ಹಳೇ ಕಟ್ಟಡದ ಮೇಲೆ ನಿರ್ಮಿಸುತ್ತಿರುವ ಹೊಸ ಕಟ್ಟಡದ ಕೆಲಸ ತಕ್ಷಣ ನಿಲ್ಲಿಸಬೇಕು. ಸರ್ಕಾರಿ ಆಸ್ಪತ್ರೆಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಒದಗಿಸಬೇಕೆಂಬ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾ ವೈದ್ಯಾಧಿಕಾರಿಗಳಿಗೆ ತಲುಪಿಸಲು ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ಅವರಿಗೆ ನೀಡಿದರು.
ಡಿ.ವೈ.ಎಫ್.ಐ ರಾಜ್ಯ ಮುಖಂಡ ಕುಂದಲಗುರ್ಕಿ ಮುನೀಂದ್ರ, ವಾಸು, ಮಂಜುನಾಥ್, ನರಸಿಂಹ, ಚಂದ್ರಪ್ಪ, ನಾಗರಾಜಪ್ಪ, ಮುನಿರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -