ಕ್ರೀಡಾಪಟುಗಳು ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿದ್ದು ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ತಾಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ 2016-17 ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಡಶಾಲೆಗಳ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳುವುದರೊಂದಿಗೆ ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿರಬೇಕು. ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಗಮನ ಹರಿಸದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶಾರೀರಕ ಹಾಗು ಭೌತಿಕ ಬೆಳವಣಿಗೆಯಾಗುತ್ತದೆ. ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಮಕ್ಕಳನ್ನು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಸುವುದರಿಂದ ಉತ್ತಮ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ ಹಾಗಾಗಿ ದೈಹಿಕ ಶಿಕ್ಷಕರು ಇನ್ನಷ್ಟು ಕ್ರೀಡಾಪಟುಗಳನ್ನು ಬೆಳೆಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.
ಕ್ರೀಡಾಕೂಟದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ. ಲಕ್ಷ್ಮಿನಾರಾಯಣರೆಡ್ಡಿ ನೆರವೇರಿಸಿದರೆ ಕ್ರೀಡಾ ಕೂಟದ ಧ್ವಜಾರೋಹಣವನ್ನು ಜಿ.ಪಂ ಉಪಾಧ್ಯಕ್ಷೆ ಪಿ. ನಿರ್ಮಲಾಮುನಿರಾಜು ನೆರವೇರಿಸಿದರು.
ಜಿ.ಪಂ ಸದಸ್ಯ ಬಂಕ್‍ಮುನಿಯಪ್ಪ, ನಗರಸಭೆ ಸದಸ್ಯರಾದ ಅಪ್ಸರ್‍ಪಾಷ, ವೆಂಕಟಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ. ಗುರುರಾಜರಾವ್, ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸಪ್ಪ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀರಾಮಯ್ಯ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -