ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ನಡೆಸುವಾಗ ಸ್ಥಳೀಯ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಸದಸ್ಯರ ಗಮನಕ್ಕೆ ತರಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಮಾಡುವಂತಹ ಪಿಡಿಓಗಳು ಗ್ರಾಮ ಪಂಚಾಯತಿಗಳ ಅಭಿವೃದ್ಧಿಯ ನೇರ ಹೊಣೆಗಾರಿಕೆ ಹೊತ್ತುಕೊಂಡಿದ್ದೀರಿ, ಯಾರ ಒತ್ತಡಗಳಿಗೂ ಮಣಿಯದೇ ಪ್ರಾಮಾಣಿಕವಾಗಿ ಕೆಲಸ ಮಾಡಿ. ಕಾಮಗಾರಿಗಳ ಗುಣಮಟ್ಟ ಹಾಗೂ ಸ್ಥಳೀಯವಾಗಿ ಬರುವಂತಹ ಕೆಲವು ಸಣ್ಣಪುಟ್ಟ ಲೋಪದೋಷಗಳನ್ನು ನಿವಾರಣೆ ಮಾಡಿಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಜನಪ್ರತಿನಿಧಿಗಳನ್ನು ಬಳಕೆ ಮಾಡಿಕೊಳ್ಳಿ. ಕಾನೂನು ಬಾಹಿರವಾಗಿ ಒತ್ತಡಗಳಿಗೆ ಮಣಿದು ಸರ್ಕಾರದಿಂದ ಬರುವಂತಹ ನಿರ್ದೇಶನಗಳಿಗೆ ಅನುಗುಣವಾಗಿ ಕೆಲಸ ಮಾಡದ ಅಧಿಕಾರಿಗಳ ವೇತನವನ್ನು ತಡೆಹಿಡಿಯುವುದರ ಜೊತೆಗೆ ಅಮಾನತ್ತು ಮಾಡುವಂತಹ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಮುಂದಿನ ಡಿಸೆಂಬರ್ ೩೧ ರೊಳಗೆ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗಳಲ್ಲಿರುವ ಹಳ್ಳಿಗಳಲ್ಲಿ ಪ್ರತಿಯೊಂದು ಕುಟುಂಬಕ್ಕೂ ಶೌಚಾಲಯ ನಿರ್ಮಾಣವಾಗಿರಬೇಕು. ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಡೆಗೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ನಿರ್ಮಲ ಮುನಿರಾಜು ಮಾತನಾಡಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೆ ಯಾರೂ ಸ್ಪಂದಿಸುವುದಿಲ್ಲ, ಬೇಜಾವಾಬ್ದಾರಿಯಿಂದ ಕೆಲಸ ಮಾಡುತ್ತಾರೆ ಇದೇ ಪರಿಸ್ಥಿತಿ ಮುಂದುವರೆದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಬ್ಲೂಡು ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ತಾಲ್ಲೂಕಿನ ಬಹಳಷ್ಟು ಗ್ರಾಮ ಪಂಚಾಯತಿಗಳಲ್ಲಿನ ಪಂಚಾಯತಿ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ, ಐ.ಎ.ಎಸ್.ಅಧಿಕಾರಿಗಳಂತೆ ವರ್ತನೆ ಮಾಡುತ್ತಾರೆ. ಕಂದಾಯ ಜಮೀನುಗಳಲ್ಲಿ ನಿವೇಶನಗಳನ್ನು ಸಿದ್ದಗೊಳಿಸಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮ ಪಂಚಾಯತಿಯಿಂದ ನಮೂನೆ ೯,೧೦ ಫಾರಂಗಳನ್ನು ನೀಡಿದ್ದಾರೆ. ಪಂಚಾಯತಿಗಳ ವ್ಯಾಪ್ತಿಗಳಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್‌ಗಳನ್ನು ನಿರ್ಮಾಣ ಮಾಡಲು ಅನುಕೂಲ ಮಾಡಿಕೊಡುವ ಕಡೆಗೆ ಹೆಚ್ಚು ಕಾಳಜಿ ತೋರಿಸುತ್ತಿದ್ದಾರೆಯೆ ಹೊರತು ಪಂಚಾಯತಿಗಳ ಅಭಿವೃದ್ಧಿಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಬಾಸ್ಕರ್, ಜಿಲ್ಲಾ ಪಂಚಾಯತಿ ಸದಸ್ಯರಾದ ಡಾ.ಜಯರಾಮರೆಡ್ಡಿ, ತನುಜಾರಘು, ಸತೀಶ್, ತಾಲ್ಲೂಕು ಪಂಚಾಯತಿ ಇ.ಓ ವೆಂಕಟೇಶ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶ್ರೀನಾಥ್‌ಗೌಡ ಮತ್ತಿತರರು ಹಾಜರಿದ್ದರು.