ಬಯಲುಸೀಮೆಯ ಪ್ರದೇಶದಲ್ಲಿ ಅಲ್ಪಸ್ವಲ್ಪ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಶ್ರಮಿಕ ರೈತರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 20 ಲಕ್ಷ ರೂಗಳ ವೆಚ್ಚದ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ಬಾರಿ ಮಳೆಯಾಗದೇ ಬರಗಾಲ ಬಂದಿದ್ದು, ರಾಸುಗಳಿಗೆ ಮೇವು ಮತ್ತು ನೀರಿನ ಕೊರತೆ ಉಂಟಾಗಿದೆ. ಈಚೆಗೆ ಪರಿಶೀಲನೆಗೆಂದು ಆಗಮಿಸಿದ್ದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದು, ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದೇನೆ. ನೀರಿನ ತೊಂದರೆಯಿದ್ದರೂ ಜಿಲ್ಲೆಯು ಹಾಲಿನ ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ. ಗುಣಮಟ್ಟದ ಹಾಲಿಗೂ ಜಿಲ್ಲೆ ಹೆಸರುಪಡೆದಿದೆ. ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರವೂ ಬಹುಮುಖ್ಯ. ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಪ್ರತಿದಿನ 3000 ಲೀಟರ್ ಹಾಲು ಸಂಗ್ರಹಿಸಿ ತಾಲ್ಲೂಕಿನಲ್ಲೇ ದ್ವಿತೀಯ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತು. ಹೆಚ್ಚು ಹಾಲನ್ನು ಉತ್ಪಾದಿಸುವ ಸದಸ್ಯರಿಗೆ ಬಹುಮಾನಗಳನ್ನು ನೀಡಲಾಯಿತು.
ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ.ಚನ್ನೇಗೌಡ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಂ.ಗೋಪಾಲಗೌಡ, ಉಪಾಧ್ಯಕ್ಷೆ ಶಶಿಕಲಾ ನಟರಾಜ್, ಮೇಲೂರು ರವಿಕುಮಾರ್, ಕೋಚಿಮುಲ್ ಉಪವ್ಯವಸ್ಥಾಪಕ ಡಾ.ಕೆ.ಜಿ.ಈಶ್ವರಯ್ಯ, ವಿಸ್ತರಣಾಧಿಕಾರಿ ಕೆ.ಎನ್.ಬಿ.ರೆಡ್ಡಿ, ಕೆನರಾಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಜಯಕುಮಾರ್, ಎಸ್.ಎಫ್.ಸಿ.ಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಮುನಿನಾರಾಯಣಪ್ಪ, ವೆಂಕಟಮೂರ್ತಿ, ಪುಟ್ಟಮೂರ್ತಿ, ಬಿ.ಕೆ.ರಾಮಚಂದ್ರ, ರಮೇಶ, ಸೂರ್ಯನಾರಾಯಣಗೌಡ, ಅಫ್ಸರ್ಪಾಷ, ರಘುರಾಜ್, ನಾರಾಯಣಸ್ವಾಮಿ, ಮುನಿರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.