ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗ್ರತೆ ವಹಿಸಬೇಕು. ಬಾಲ್ಯ ವಿವಾಹ ಮಾಡುವುದು ಅಪರಾಧ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶನಿವಾರ ನಗರದಲ್ಲಿ ಜಾಥಾ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಸಿಬ್ಬಂದಿ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಕಂಡು ಬಂದಲ್ಲಿ ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ರಚನೆ ಮಾಡಲಾಗಿರುವ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳು ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ, ಮುಂತಾದ ಕಡೆಗಳಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಹಿತಿ ನೀಡಿದರು.
ಬಾಲ್ಯ ವಿವಾಹಗಳು ನಡೆಯುವುದು ಕಂಡು ಬಂದಲ್ಲಿ ೧೦೯೮ ಗೆ ಕರೆ ಮಾಡಬಹುದು. ಮಾಹಿತಿ ನೀಡದವರ ಮಾಹಿತಿ ಗೌಪ್ಯವಾಗಿಡುತ್ತೇವೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಲಕ್ಷ್ಮೀದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರಸ್ವತಿ ಕಾನ್ವೆಂಟ್ ಶಾಲೆಯ ನಿವೃತ್ತಿ ಶಿಕ್ಷಕಿ ಸೀತಾಲಕ್ಷ್ಮೀ ಹಾಗೂ ಸಿಬ್ಬಂದಿ ಹಾಜರಿದ್ದರು.