ಮಂಗಳ ಗ್ರಹವನ್ನು ತಲುಪಿದ ಉಪಗ್ರಹವನ್ನು ತಯಾರಿಸಿರುವ ಮೇಧಾವಿಗಳಿರುವ ಭಾರತದಲ್ಲಿ ಇಂದಿಗೂ ಮಕ್ಕಳ ಪೌಷ್ಟಿಕತೆ ಹಾಗು ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸುವ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಮಾಡುತ್ತಿರುವುದು ದುಃಖಕರ ಸಂಗತಿ ಎಂದು ಚಿಕ್ಕಬಳ್ಳಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ.ತುರಮರಿ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದ ಕಲ್ಯಾಣಮಂಟಪದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಮಕ್ಕಳ ಅಪೌಷ್ಠಿಕತೆ ತಡೆಗಟ್ಟುವುದರ ಬಗೆಗಿನ ಸಮಗ್ರ ಕಾರ್ಯಯೋಜನೆ ಅನುಷ್ಠಾನ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವುದರ ಬಗ್ಗೆ ಅರಿವು-ನೆರವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದುವರೆಯುತ್ತಿರುವ ಭಾರತ ದೇಶದಲ್ಲಿ ಅಪೌಷ್ಟಿಕತೆಯನ್ನು ತಡೆಗಟ್ಟಿ ಸಮಾಜವನ್ನು ಸದೃಢವಾಗಿ ನಿರ್ಮಾಣ ಮಾಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನತೆ ಆಸಕ್ತಿ ವಹಿಸಬೇಕು. ಪ್ರತಿಯೊಂದು ಮಗುವಿಗೂ ತಾಯಂದಿರು ತಮ್ಮ ಎದೆಹಾಲನ್ನು ಉಣಿಸುವುದರೊಂದಿಗೆ, ಮಕ್ಕಳಿಗೆ ಹಸಿರು ತರಕಾರಿಗಳು, ಸೊಪ್ಪು, ಸೇರಿದಂತೆ ಪೌಷ್ಟಿಕಾಂಶ ಭರಿತವಾದ ಆಹಾರವನ್ನು ನೀಡಿ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಬೇಕು. ಗುಣಮಟ್ಟದ ಶಿಕ್ಷಣ ಮತ್ತು ಚಿಕ್ಕವಯಸ್ಸಿನಿಂದಲೇ ಸಂಸ್ಕಾರವನ್ನು ಬೆಳೆಸಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಖಡ್ಡಾಯವಾಗಿ ಮರಳಿ ಶಾಲೆಯ ಕಡೆಗೆ ತರುವಂತಹ ಕೆಲಸಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹೇಳಿದರು.
ಮಕ್ಕಳಿಗೆ, ಗರ್ಭಿಣಿಯರಿಗೆ ನೀಡಬೇಕಿರುವ ವಿವಿಧ ರೀತಿಯ ಕಾಳು ಬೇಳೆಗಳು, ತರಕಾರಿ ಸೊಪ್ಪು, ಮೊಳಕೆ ಬರಿಸಿರುವ ಕಾಳುಗಳು, ಹಣ್ಣುಗಳು ಮುಂತಾದ ತಿನಿಸುಗಳು ಹಾಗೂ ಮಾಹಿತಿ ಫಲಕಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಎನ್.ಶೀಲಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿಜಯದೇವರಾಜ್‌ಅರಸ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ, ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲರಾದ ಈ.ಡಿ.ಶ್ರೀನಿವಾಸ್, ಎಸ್.ಕುಮುದಿನಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಲಕ್ಷ್ಮಿದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಡಾ.ಎಂ.ವಿಜಯಾ, ಮಕ್ಕಳ ತಜ್ಞ ಡಾ. ಗಿರೀಶ್, ಸೌಮ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.