ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು. ರೋಗ ಬಂದ ನಂತರ ಚಿಕಿತ್ಸೆ ಪಡೆದುಕೊಳ್ಳುವ ಬದಲು ರೋಗ ಬರದಂತೆ ತಡೆಯುವುದು ಒಳ್ಳೆಯದು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಅರಿವು ಮೂಡಿಸುವ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ, ಆನೆಕಾಲು ರೋಗಗಳು ಹರಡುತ್ತವೆ. ಆದ್ದರಿಂದ ನಿಮ್ಮ ಮನೆಗಳ ಸುತ್ತ ಎಲ್ಲೂ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆಗಳನ್ನು ನಿಯಂತ್ರಿಸಿ. ತಾಲ್ಲೂಕಿನಾದ್ಯಂತ ಆರೋಗ್ಯ ಇಲಾಖೆಯು ಗ್ರಾಮಸ್ಥರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದೆ. ಸಾರ್ವಜನಿಕರು ಯಾವುದೇ ರೀತಿಯ ಜ್ವರ ಇದ್ದರೂ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಶ್ರೀ ಸರಸ್ವತಿ ಕಾನ್ವೆಂಟ್ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಜನರಲ್ಲಿ ಸೊಳ್ಳೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿದರು.
ಡಾ.ವಿಜಯ್, ದಾದಾಪೀರ್, ವಿಜಯಮ್ಮ, ಮುನಿರತ್ನಮ್ಮ, ಕುಮಾರಸ್ವಾಮಿ, ವಿ.ನಂದಿನಿ, ಮೀನಾ, ಮಂಗಳಾ, ಸಿ.ವಿಜಯಾ ಹಾಜರಿದ್ದರು.