ಮಹಿಳೆಯರು ಸಂಘಟಿತರಾದಾಗ ಮಾತ್ರ, ಸಮಾಜದಲ್ಲಿ ಉತ್ತಮವಾದ ಬದಲಾವಣೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಮೇಲೂರು ಗ್ರಾಮ ಪಂಚಾಯತಿ ಸದಸ್ಯ ಆರ್.ಎ.ಉಮೇಶ್ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಒಕ್ಕೂಟದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿವೆ. ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪಗಳು, ಹೀಗೆ ಹತ್ತು ಹಲವಾರು ರೀತಿಯಲ್ಲಿ ಹಣವನ್ನು ಬಿಡುಗಡೆ ಮಾಡುತ್ತಿದ್ದು, ನರೇಗಾ ಯೋಜನೆಯಡಿಯಲ್ಲಿಯೂ ಅನುದಾನವನ್ನು ಮೀಸಲಿಟ್ಟಿದೆ. ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಮಾದರಿಯಲ್ಲೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು, ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಬಿಡುಗಡೆ ಮಾಡುತ್ತಿರುವಂತಹ ಸಹಾಯಧನವನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು. ೨೫ ಸಂಘಗಳ ಮೇಲೆ ಉಸ್ತುವಾರಿ ವಹಿಸಿಕೊಳ್ಳುವಂತಹ ಒಕ್ಕೂಟಗಳೂ ಕೂಡಾ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ಭಾಗದ ಅಭಿವೃಧ್ದಿಗೆ ಸಹಕರಿಸಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕಿ ನಿರ್ಮಲ ಮಾತನಾಡಿ, ಯೋಜನೆಯಿಂದ ನೀಡುತ್ತಿರುವ ಎಲ್ಲಾ ಸೌಲತ್ತುಗಳ ಬಗ್ಗೆ ಒಕ್ಕೂಟದ ಪದಾಧಿಕಾರಿಗಳು ಬದ್ದತೆಯಿಂದ ಕೆಲಸ ಮಾಡಬೇಕು, ನಿಷ್ಟೆ, ಪ್ರಾಮಾಣಿಕತೆ, ಹಾಗೂ ಶ್ರದ್ದೆಯಿಂದ ಸೇವೆ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವೃದ್ಧರಿಗೆ ಪಿಂಚಣಿ ಸೌಲಭ್ಯವನ್ನು ಕಲ್ಪಿಸಿಕೊಡಲಾಯಿತು. ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಹಂಡಿಗನಾಳ ಗ್ರಾಮ ಪಂಚಾಯತಿ ಸದಸ್ಯ ಎ.ಎಂ.ತ್ಯಾಗರಾಜ್, ಶಾಂತಶೆಟ್ಟಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -