ಸೌಲಭ್ಯ ವಂಚಿತ ಹಾಗೂ ನೊಂದ ರೈತರ ಪರ ಧ್ವನಿಯಾಗಿ ಹೋರಾಡಲು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಬಲವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಪದಾಧಿಕಾರಿಗಳು ಮುಂದಾಗಬೇಕು ಎಂದು ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲ್ಲೂಕು ಘಟಕದ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ತೀವ್ರ ಬರಗಾಲಕ್ಕೆ ತುತ್ತಾಗಿರುವ ಬಯಲುಸೀಮೆ ಭಾಗದಲ್ಲಿನ ರೈತರು, ಸುಮಾರು ೧,೩೦೦ ಅಡಿಗಳ ಆಳದಿಂದ ಕೊಳವೆಬಾವಿ ಮೂಲಕ ತೆಗೆದು ಬೆಳೆಯುವ ಬೆಳೆಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗುತ್ತಿದ್ದಾರೆ.
ಇದಲ್ಲದೇ ರೈತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ದಬ್ಬಾಳಿಕೆಯನ್ನು ತಡೆಗಟ್ಟಬೇಕಾದರೆ ರೈತರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಈ ನಿಟ್ಟಿನಲ್ಲಿ ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ ಪದಾಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಸಿಗುವಂತೆ ಮಾಡಲು ನಿರಂತರ ಹೋರಾಟಗಳನ್ನು ನಡೆಸಬೇಕು ಎಂದರು.
ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ನಗರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ರಾಮಕೃಷ್ಣಪ್ಪ, ವೇಣುಗೋಪಾಲ್, ಅಂಬರೀಷ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.