Home News ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಎರಡನೇ ವಾರ್ಷಿಕೋತ್ಸವ

ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಎರಡನೇ ವಾರ್ಷಿಕೋತ್ಸವ

0

ನಗರದ ಉಲ್ಲೂರು ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಎರಡನೇ ವಾರ್ಷಿಕೋತ್ಸವ ಅಂಗವಾಗಿ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ, ಕ್ರೀಡಾಪಟುಗಳಿಗೆ ಟೀ ಷರ್ಟ್ ವಿತರಣೆ ಹಾಗೂ ಪ್ರತಿಭಾವಂತರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ಹಲವಾರು ಪ್ರತಿಭೆಗಳಿಗೆ ಪ್ರೋತ್ಸಾಹ ಸಿಕ್ಕಿದಲ್ಲಿ ರಾಜ್ಯ, ರಾಷ್ಟ್ರ ಮಟ್ಟವಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಗಳಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಈಗಾಗಲೇ ತಾಲ್ಲೂಕಿನ ಹಲವು ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಎಳೆಯ ವಯಸ್ಸಿನಿಂದಲೇ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ಖಾಸಗಿ ಶಾಲೆ ಹಾಗು ಆಂಗ್ಲ ಭಾಷೆಯ ಮೇಲಿನ ವ್ಯಾಮೋಹದಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಬದಲಿಗೆ ಎಲ್ಲಾ ಸವಲತ್ತುಗಳೂ ಇರುವ ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಯತ್ನಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮುಂದಿನ ದಿನಗಳಲ್ಲಿ ಪೋಷಕರ ಮನವೊಲಿಸುವ ಕೆಲಸಕ್ಕೆ ಮುಂದಾಗಲಿದೆ. ಸರ್ಕಾರಿ ಶಾಲೆಯಲ್ಲಿ ಇದೀಗ ಕೊರತೆಯಿರುವ ಆಂಗ್ಲಬಾಷೆ ಬೋದನೆಗಾಗಿ ಶಿಕ್ಷಕರನ್ನು ನಿಯೋಜಿಸಿದ್ದೇ ಆದಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದರಲ್ಲೂ ಕಡಿಮೆಯಿರುವುಲ್ಲ ಎಂದರು.
ಈ ಸಂದರ್ಭದಲ್ಲಿ ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ, ಕ್ರೀಡಾಪಟುಗಳಿಗೆ ಟೀ ಷರ್ಟ್ ವಿತರಿಸಲಾಯಿತು. ವಿವಿಧ ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಕ್ಮೀಪತಿ, ಗೌರವಾಧ್ಯಕ್ಷ ಮುನಿರಾಜು, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಪುರುಷೋತ್ತಮ್, ರಾಷ್ಟ್ರೀಯ ವಾಲೀಬಾಲ್ ಕ್ರೀಡಾಪಟು ಮಹೇಶ್, ಕಬಡ್ಡಿ ಕ್ರೀಡಾಪಟು ವೆಂಕಟಾಚಲಪತಿ, ಮಾಜಿ ಯೋಧ ಭಗವಾನ್‌ಸಿಂಗ್, ಸಿಆರ್‌ಪಿ ಪ್ರಕಾಶ್, ಶಿಕ್ಷಕಿ ಚಂದ್ರಕಲಾ ಹಾಜರಿದ್ದರು.