ಶ್ರದ್ಧಾಭಕ್ತಿಯ ಸಂಕೇತವಾದ ರಂಜಾನ್ ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಸಂಭ್ರಮದಿಂದ ತಾಲ್ಲೂಕಿನಾದ್ಯಂತ ಆಚರಿಸಿದರು.
ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೀಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ನಿಧನ ಹೊಂದಿರುವ ಪೂರ್ವಜರ ಸಮಾಧಿಗಳ ಬಳಿ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಹಬ್ಬಕ್ಕೂ ಒಂದು ತಿಂಗಳು ಮುನ್ನ ಅವರು ಕೈಗೊಳ್ಳುವ ರೋಜಾ ಆಚರಣೆಯಲ್ಲಿ ಹಿರಿಯರು ಮತ್ತು ಕಿರಿಯರು ಬೇಧವಿಲ್ಲದೆ ಪಾಲ್ಗೊಂಡಿದ್ದರು. ಪವಿತ್ರ ರಂಜಾನ್ ಮಾಸವನ್ನು ಧಾರ್ಮಿಕ ತಿಂಗಳು. ಉಪವಾಸದ ತಿಂಗಳೆಂದೇ ಕರೆಯುತ್ತಾರೆ. ತಿಂಗಳು ಪೂರ್ತಿ ಕುರ್ಆನ್ ಪಠಿಸುತ್ತಾರೆ. ಎಲ್ಲರ ಸುಖ-ಸಂತೋಷ-ನೆಮ್ಮದಿಗಾಗಿ ಅಲ್ಲಾಹ್ನಲ್ಲಿ ಬಿನ್ನವಿಸಿಕೊಳ್ಳುತ್ತಾರೆ. ಬಡವರಿಗೆ ಮತ್ತು ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುತ್ತಾರೆ. ದಾನ ಮಾಡುತ್ತಾರೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಪೂರ್ವಜರ ಸಮಾಧಿಗಳಿಗೆ ಪೂಜೆ ಸಲ್ಲಿಸಿದ ನಂತರ ಬಡವರಿಗೆ ದಾನ ನೀಡಿದರು.
‘ಪವಿತ್ರ ಗ್ರಂಥ ಕುರ್ಆನ್ ರಚನೆ ಆರಂಭಗೊಂಡಿದ್ದು ರಂಜಾನ್ ತಿಂಗಳಿನಲ್ಲಿ. ರಂಜಾನ್ ತಿಂಗಳಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆಯಿದೆ. ತಾವು ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಬಡವರಿಗೆ ದಾನ ಮಾಡುವ ಉದಾತ್ತ ಹಬ್ಬವಿದು. ಸಮಾಜದಲ್ಲಿ ಸೌಹಾರ್ಧತೆಗೆ ಪ್ರತೀಕವಾದ ಈ ಹಬ್ಬ ಐಕ್ಯತೆ ಹಾಗೂ ಅಭಿವೃದ್ಧಿಗೆ ಪೂರಕವಾಗಲಿ’ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಧರ್ಮಗುರು ಷಬ್ಬೀರ್ ಆಲಂ ಬೋಧನೆ ಮಾಡಿದರು. ಜಾಮೀಯಾ ಮಸೀದಿ ಗುರು ಗುಲಾಮ್ ರಬ್ಬಾನಿ, ಮಸೀದಿ ಅಧ್ಯಕ್ಷ ರಶೀದ್ ಸಾಬ್, ಸಲಾಂ, ನಗರಸಭಾ ಸದಸ್ಯ ಅಫ್ಸರ್ ಪಾಷ, ಸೂರ್ಯನಾರಾಯಣಗೌಡ, ಕನಕಪ್ರಸಾದ್, ಮಂಜುನಾಥ್, ಶ್ರೀಧರ್, ಮಳ್ಳೂರಯ್ಯ, ಅಬ್ದುಲ್ ಅಜೀಜ್, ರಹಮಾನ್, ಸಲಾಂ, ಶಮೀ, ಅಬ್ದುಲ್ ಗಫೂರ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -