Home News ಸಣ್ಣ ನೀರಾವರಿ ಇಲಾಖೆಯಿಂದ ನಾಲ್ಕು ಕೋಟಿ ರೂ ಬಿಡುಗಡೆ

ಸಣ್ಣ ನೀರಾವರಿ ಇಲಾಖೆಯಿಂದ ನಾಲ್ಕು ಕೋಟಿ ರೂ ಬಿಡುಗಡೆ

0

ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈಗಾಗಲೇ ಸುಮಾರು ೪ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ವರದನಾಯಕನಹಳ್ಳಿ ಗ್ರಾಮದಲ್ಲಿ ಬುಧವಾರ ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು ೨೫ ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಮ್ಮನಕೆರೆಗೆ ಸಂಪರ್ಕ ಕಲ್ಪಿಸುವ ಪೋಷಕ ಕಾಲುವೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಸರ್ಕಾರದ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮವನ್ನು ಆಯ್ಕೆ ಮಾಡುವುದರೊಂದಿಗೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಅಬ್ಲೂಡು ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ ಮಾತನಾಡಿ, ತಾಲ್ಲೂಕಿನ ಬಹುತೇಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡಗಳ ನಿರ್ಮಾಣಕ್ಕಾಗಿ ತಲಾ ೨ ಲಕ್ಷ ರೂಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಹಂಡಿಗನಾಳ ಕ್ಷೇತ್ರದ ತಾಲ್ಲೂಕು ಪಂಚಾಯತಿ ಸದಸ್ಯ ಕೆ.ಲಕ್ಷ್ಮಿನಾರಾಯಣರೆಡ್ಡಿ, ಗ್ರಾಮ ಪಂಚಾಯತಿ ಸದಸ್ಯ ದ್ಯಾವಪ್ಪ, ಅಬ್ಲೂಡು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್, ಸೂರ್ಯನಾರಾಯಣಗೌಡ, ಗೋಪಾಲಪ್ಪ, ವೆಂಕಟರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.