ಹಳ್ಳಿಗಳ ಅಭಿವೃದ್ಧಿಗಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ನಾಗರಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದಲ್ಲಿ ಭಾನುವಾರ ಶಾಸಕರ ಅನುದಾನದ ೫ ಲಕ್ಷ ರೂಪಾಯಿಗಳು ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯಡಿಯಲ್ಲಿ ೫ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಚರಂಡಿಗಳು, ಹಾಗೂ ರಸ್ತೆಗಳನ್ನು ಒದಗಿಸುವಂತಹ ಕೆಲಸಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ. ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ತಾಲ್ಲೂಕಿನಾದ್ಯಂತ ಸುಮಾರು ೯೦ ಹಳ್ಳಿಗಳಲ್ಲಿ ಎಸ್.ಸಿ.ಪಿ.ಮತ್ತು ಎಸ್.ಟಿ.ಪಿ ಯೋಜನೆಯಡಿಯಲ್ಲಿ ಸಿ.ಸಿ.ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಜಿಲ್ಲಾಡಳಿತದೊಂದಿಗೆ ನಿರಂತರವಾಗಿ ಸಂರ್ಪಕ ಸಾಧಿಸಿ ಕುಡಿಯುವ ನೀರಿನ ಬವಣೆಯನ್ನು ನೀಗಿಸುವಂತಹ ಪ್ರಯತ್ನವನ್ನು ಮಾಡಲಾಗುತ್ತಿದೆ. ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡು ಬಂದಲ್ಲಿ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಲಾಗುತ್ತದೆ. ಗುಣಮಟ್ಟದಲ್ಲಿ ಗ್ರಾಮಸ್ಥರು ರಾಜೀಯಾಗಬಾರದು ಎಂದು ಹೇಳಿದರು.
ಈಗಾಗಲೇ ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದ್ದು, ರಾಜ್ಯದ ಕಂದಾಯ ಸಚಿವರು, ಕೃಷಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಿ, ೧೧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಶಾಸಕರ ಸಭೆಯನ್ನು ಕರೆದು ಚರ್ಚೆ ಮಾಡಿದ್ದಾರೆ. ಕ್ಷೇತ್ರದ ಸಮಸ್ಯೆಗಳಾದ ಕುಡಿಯುವ ನೀರು, ದನಕರುಗಳಿಗೆ ಮೇವುಗಳ ಸರಬರಾಜು ಮುಂತಾದ ಸಮಸ್ಯೆಗಳ ಬಗ್ಗೆ ವಿವರಿಸಿದ್ದೇವೆ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷೆ ಜಮುನಾಧರ್ಮೇಂದ್ರ, ಉಪಾಧ್ಯಕ್ಷ ಆಂಜನೇಯರೆಡ್ಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜುನಾಥ್,ಆರ್.ಎ.ಉಮೇಶ್, ಮುಖಂಡರಾದ ರಾಮಾಂಜಿನಪ್ಪ, ರಾಮಣ್ಣ, ನಾಗರಾಜು, ನಾರಾಯಣಪ್ಪ, ದೇವರಾಜು, ಮುನೇಗೌಡ, ಚಿಕ್ಕದ್ಯಾವಪ್ಪ, ಮಂಜುನಾಥ್, ಮೂರ್ತಿ, ಕೃಷ್ಣಮೂರ್ತಿ, ನಾರಾಯಣಸ್ವಾಮಿ, ವೆಂಕಟರೆಡ್ಡಿ, ಶಶಿಕುಮಾರ್, ಪಿಳ್ಳೇಗೌಡ, ಗೋಪಾಲಪ್ಪ, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -