ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಜೀವನಮಟ್ಟ ಸುಧಾರಿಸಲು ಈ ಭಾಗದ ಹೈನುಗಾರಿಕೆ ಹಾಗೂ ಹಾಲು ಉತ್ಪಾದನೆಯೇ ಮುಖ್ಯ ಕಾರಣ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಿಕೆರೆ ಗ್ರಾಮದಲ್ಲಿ ಸೋಮವಾರ ಸುಮಾರು ೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರು ದಶಕಗಳ ಹಿಂದೆ ಈ ಭಾಗದ ರೈತರ ಉಪಕಸುಬಾಗಿದ್ದ ಹೈನುಗಾರಿಕೆ ಇದೀಗ ಮುಖ್ಯ ಕಸುಬಾಗಿದೆ. ಅವಿಭಜಿತ ಜಿಲ್ಲೆಯಲ್ಲಿ ಇಂದು ಕುಡಿಯುವ ನೀರಿಗೂ ಪರಿತಪಿಸುವ ವಾತಾವರಣ ನಿರ್ಮಾಣವಾಗಿದ್ದು, ರೈತರು ಕೃಷಿ ಮಾಡಲಾಗುತ್ತಿಲ್ಲ. ಬಹುತೇಕ ರೈತರು ಮನೆಯಲ್ಲಿ ಒಂದೆರಡು ಹಸುಗಳನ್ನು ಸಾಕಿ ಹಾಲು ಉತ್ಪಾದಿಸಿ ಜೀವನ ನಡೆಸುವಂತಾಗಿದೆ ಎಂದರು.
ಕೋಚಿಮುಲ್ ಅಧ್ಯಕ್ಷ ಜೆ.ಕಾಂತರಾಜ್ ಮಾತನಾಡಿ, ಒಕ್ಕೂಟದಿಂದ ಪ್ರತಿನಿತ್ಯ ೮.೫ ಲಕ್ಷ ಲೀನಷ್ಟು ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದಕರು ಗುಣಮಟ್ಟದ ಹಾಲು ಪೂರೈಸುವುದರೊಂದಿಗೆ ಒಕ್ಕೂಟದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಯಾವುದೇ ಒಂದು ಸಂಘ ಅಭಿವೃದ್ಧಿಯಾಗಬೇಕಾದರೆ ಅದಕ್ಕೆ ಸಂಘದ ಎಲ್ಲಾ ಸದಸ್ಯರೂ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಅತ್ಯಗತ್ಯ. ಹಾಲಿನ ಗುಣಮಟ್ಟ ಹಾಗೂ ಉತ್ಪಾದನೆಯ ಕಡೆ ಹೆಚ್ಚಿನ ಗಮನಹರಿಸಬೇಕು. ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯೆ ತನುಜಾ ರಘು ಹಾಗೂ ಬಾಗೇಪಲ್ಲಿಯ ಕೋಚಿಮುಲ್ ನಿರ್ದೇಶಕ ಅಶ್ವತ್ಥರೆಡ್ಡಿ ಮಾತನಾಡಿದರು.
ಅರಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪಿ.ನಾಗರಾಜಪ್ಪ, ಶಿಡ್ಲಘಟ್ಟ ಶಿಬಿರ ಘಟಕದ ಉಪ ವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ತಾಲ್ಲೂಕು ಪಂಚಾಯತಿ ಸದಸ್ಯ ರಾಜಶೇಖರ್, ಚೀಮಂಗಲ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಅರಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಎನ್.ದೇವರಾಜ್, ಮುಖಂಡರಾದ ವೆಂಕಟೇಶಪ್ಪ, ಎನ್.ಶ್ರೀನಿವಾಸ್, ಸಂಘದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -