Home News ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ

ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ

0

ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ “ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ” ದ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಟೋಗೆ ಮೈಕ್ ಅಳವಡಿಸಿ, ಆ ಮೂಲಕ ಬಾಲಕಾರ್ಮಿಕರನ್ನು ತಡೆಗಟ್ಟುವ ಕುರಿತಾದ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಜೆ.ಎಂ.ಎಫ್.ಸಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಮಾತನಾಡಿದರು.
ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಾರದು. ಬಾಲ್ಯದಲ್ಲಿ ಆಟವಾಡುತ್ತ , ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇದು ಒಂದು ಸಾಮಾಜಿಕ ಪಿಡುಗು ಎಂದು ಅವರು ತಿಳಿಸಿದರು.
ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ, ಗಾರ್ಮೆಂಟ್ಸ್ ಗಳಲ್ಲಿ, ಬೇಕರಿ, ಗ್ಯಾರೇಜ್‌, ಹೊಟೇಲ್‌, ಕಾರ್ಖಾನೆಗಳಲ್ಲಿ, ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ‌ಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಕ್ಕಳು ಮಾಡುತ್ತಿದ್ದಾರೆ. ಇದರಿಂದ ಅವರು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜನಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿ ತಾಲ್ಲೂಕಿನಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವುದು ಕಂಡುಬಂದಲ್ಲಿ ತಕ್ಷಣವೇ ಮಾಹಿತಿ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ.ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶೆ ಡಿ.ರೋಹಿಣಿ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಾಗವೇಣಿ, ಕಾರ್ಮಿಕ ನಿರೀಕ್ಷಕ ರಾಮಾಂಜಿನಪ್ಪ ಹಾಜರಿದ್ದರು.