ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ಹಕ್ಕುಗಳ ಮಾಸಾಚರಣೆಯ ಅಂಗವಾಗಿ ತಾಲ್ಲೂಕು ಮಟ್ಟದ ಮಕ್ಕಳ ಅಭಿವೃದ್ಧಿ ವಿಷಯದ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ್ ಯರಗಟ್ಟಿ ಮಾತನಾಡಿದರು.
ಮಕ್ಕಳ ಅಭಿವೃದ್ಧಿ ವಿಷಯದ ಬಗ್ಗೆ ತಾಲ್ಲೂಕು ಮಟ್ಟದ ಮಕ್ಕಳ ಯೋಜನೆಗಳು ಮತ್ತು ಸಮಸ್ಯೆಗಳ ಅಂಕಿಅಂಶಗಳು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಹೊಂದಿರಬೇಕು. ಎಲ್ಲಾ ಹಂತಗಳಲ್ಲಿ ಈ ಅಂಕಿ ಅಂಶಗಳ ವಿಶ್ಲೇಷಣೆ ಅತ್ಯಂತ ಪ್ರಮುಖವಾಗಿ ನಡೆಯುವಂತೆ ಆಗಲೇಬೇಕು ಎಂದು ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಸಮನ್ವಯದಿಂದ ಮಕ್ಕಳ ಹಕ್ಕುಗಳ ಸ್ಥಿತಿಗತಿ ಮತ್ತು ಕಾರ್ಯಕ್ರಮಗಳ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅವರು ನಿರ್ದೇಶನ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ಅನಾಥರು ಮತ್ತು ಎಚ್‌ಐವಿ ಹೊಂದಿರುವ ಮಕ್ಕಳಿಗೆ ನೇರವಾಗಿ ಅವರ ಖಾತೆಗೆ ಸಾವಿರ ರೂ ನೀಡಲಾಗುತ್ತಿದೆ. ಇದರ ಪಲಾನುಭವಿಗಳು 72 ಇದ್ದಾರೆ. ದತ್ತು ಕಾರ್ಯಕ್ರಮದ ಅಡಿಯಲ್ಲಿ 14 ಮಕ್ಕಳು ದಾಖಲಾಗಿದ್ದಾರೆ.ಅದರಲ್ಲಿ 6 ಮಕ್ಕಳನ್ನು ದತ್ತು ನೀಡಲಾಗಿದೆ. ಪ್ರಸ್ತುತ ಸಂಸ್ಥೆಯಲ್ಲಿ 8 ಮಕ್ಕಳು ಇದ್ದಾರೆ. 2020-21 ನೇ ಸಾಲಿನಲ್ಲಿ ಬಾಲ್ಯ ವಿವಾಹಗಳು 110 ದಾಖಲಾಗಿದ್ದು ಅದರಲ್ಲಿ 103 ನ್ನು ತಡೆಗಟ್ಟಲಾಗಿದೆ. ಶಿಡ್ಲಘಟ್ಟದಲ್ಲಿ 23 ದಾಖಲಾಗಿದೆ ಎಂದು ಬಾಲ್ಯವಿವಾಹ, ಬಾಲಕಾರ್ಮಿಕತೆ, ಶಾಲೆ ಬಿಟ್ಟ ಮಕ್ಕಳು, ವಲಸೆ ಹೋಗಿರುವಂತಹ ಮಕ್ಕಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರು ಮಕ್ಕಳ ವಸತಿ ನಿಲಯಗಳ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂಕು ಪಂಚಾಯಿತಿಯ ವ್ಯವಸ್ಥಾಪಕರು ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮಸಭೆಗಳ ಬಗ್ಗೆ ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ವೆಂಕಟೇಶಮೂರ್ತಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಮ್ಮದ್ ಉಸ್ಮಾನ್, ರಾಮೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಪ್ರತಿನಿಧಿಗಳು, ಚೈಲ್ಡ್ ರೈಟ್ಸ್ ಟ್ರಸ್ಟ್ ವತಿಯಿಂದ ಸಂಯೋಜಕ ಸತೀಶ್ ಜಯರಾಂ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಭಾಗವಹಿಸಿದ್ದರು.