ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಕಾರ್ಯಪಡೆಗಳ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಹಾಗೂ ತಾಲ್ಲೂಕು ನೋಡೆಲ್ ಅಧಿಕಾರಿ ಮಹಮ್ಮದ್ ಅತೀಕ್ ಉಲ್ಲಾ ಶರೀಫ್ ಮಾತನಾಡಿದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಕಾರ್ಯಪಡೆಯನ್ನು ರಚಿಸಲಾಗಿದೆ. ಜೊತೆಗೆ ಕಾರ್ಯಪಡೆಯ ನಿರ್ವಹಣೆಗೆಂದು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಕೊರೊನಾ ಕಾರ್ಯಪಡೆಯ ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಕೋವಿಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬೆಂಗಳೂರು ನಗರ ಮತ್ತು ಹೊರ ರಾಜ್ಯಗಳಿಂದ ಬರುವ ಜನರ ಬಗ್ಗೆ ವಿಶೇಷ ನಿಗಾ ವಹಿಸಿ ಅವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಬೇಕು. ಕೋವಿಡ್ ಗೆಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಳ್ಳಲು ಸಹಾಯವಾಣಿ ಕೇಂದ್ರವನ್ನು ತೆರೆದಿದ್ದು ಅದನ್ನು ನಾಗರಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಲು ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಹಕರಿಸಬೇಕೆಂದು ನಾಗರಿಕರಿಗೆ ಮನವಿ ಮಾಡಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್, ಸಿಡಿಪಿಓ ನಾಗವೇಣಿ, ಶಿಕ್ಷಣ ಇಲಾಖೆಯ ಭಾಸ್ಕರ್ ಹಾಜರಿದ್ದರು.