ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಗೆ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಬೆಳ್ಳೂಟಿ ಮುನಿಕೆಂಪಣ್ಣ ರೈತ ಸಂಘದ ಪದಾಧಿಕಾರಿಗಳೊಂದಿಗೆ ಸಾಮೂಹಿಕ ನಾಯಕತ್ವದಲ್ಲಿ ಭೇಟಿ ನೀಡಿದ ತಹಶೀಲ್ದಾರ್‌ರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಸರ್ಕಾರ ಕೂಡಲೇ ನೈಸರ್ಗಿಕ ವಿಕೋಪಗಳ ಪರಿಹಾರ ನಿಧಿಯನ್ನು ಬಳಸಿಕೊಂಡು ಬರಗಾಲ ಪೀಡಿತ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಅಕಾಲಿಕ ಆಲೀಕಲ್ಲು ಮಳೆಯಿಂದ ಹಾನಿಯಾಗಿರುವ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ಕೂಡಲೇ ನೀಡಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.
ಅಕಾಲಿಕ ಮಳೆಯಿಂದ ನಷ್ಟಕ್ಕೆ ಒಳಗಾಗಿರುವ ರೈತರಿಗೆ ಆಪತ್ಕಾಲದ ನೆರವಿಗೆ ಮುಂದಾಗಬೇಕು. ಮಳೆಯಿಂದ ಹಾನಿಯಾಗಿರುವ ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸಮೀಕ್ಷೆ ನಡೆಸಿ ಸಂಬಂದಪಟ್ಟ ಇಲಾಖೆಗಳಿಂದ ಸೂಕ್ತ ನಷ್ಟ ಪರಿಹಾರವನ್ನು ರೈತರಿಗೆ ನೀಡಬೇಕು. ಕೊರೊನಾ ಎರಡನೇ ಅಲೆ ಉಲ್ಬಣಿಸುತ್ತಿದ್ದು ಈ ಭಾಗದ ರೈತರು ಬೆಳೆದಿರುವ ವಾಣಿಜ್ಯ ಬೆಳೆಗಳಾದ ಹೂವು, ಹಣ್ಣು, ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಇನ್ನು ಈಗಾಗಲೇ ಸರ್ಕಾರ ಎಂ ಎಸ್ ಪಿ ಬೆಲೆಗೆ ಖರೀದಿಸಿರುವ ರಾಗಿಯ ಹಣವನ್ನು ರೈತರಿಗೆ ತಕ್ಷಣವೇ ಫಾವತಿಸಬೇಕು. ಸರ್ಕಾರ ನಿಲ್ಲಿಸಿರುವ ಹನಿ ನೀರಾವರಿ ಡ್ರಿಪ್ ಸಹಾಯಧನದಿಂದ ಜಿಲ್ಲೆಯಾದ್ಯಂತ ರೇಷ್ಮೆ, ಕೃಷಿ, ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಡ್ರಿಪ್ ಅಳವಡಿಸಿಕೊಂಡಿರುವವರಿಗೆ ತೊಂದರೆಯಾಗಿದ್ದು, ಕೂಡಲೇ ಸರ್ಕಾರ ಸಹಾಯಧನ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಮನವಿಯನ್ನು ಮೇಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡುವ ಮೂಲಕ ರೈತರಿಗೆ ಸಿಗಬೇಕಾದ ಸವಲತ್ತುಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಪದಾಧಿಕಾರಿಗಳಾದ ಡಿ.ಎನ್.ರಮೇಶ್‌ಕುಮಾರ್, ವೆಂಕಟರೆಡ್ಡಿ ಹಾಜರಿದ್ದರು.