Home News ನರೇಗಾ ಯೋಜನೆಯನ್ನು ರೈತರು ಸದುಪಯೋಗ ಮಾಡಿಕೊಳ್ಳಬೇಕು – ಫೌಝೀಯಾ ತರುನ್ನುಮ್

ನರೇಗಾ ಯೋಜನೆಯನ್ನು ರೈತರು ಸದುಪಯೋಗ ಮಾಡಿಕೊಳ್ಳಬೇಕು – ಫೌಝೀಯಾ ತರುನ್ನುಮ್

0

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳನ್ನು ಮತ್ತು ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ಮಾತನಾಡಿದರು.

 ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ರೈತರು ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

 ನರೇಗಾ ಯೋಜನೆಯಡಿ ದೋರೆಯುವ ಸೌಲಭ್ಯಗಳು ಮತ್ತು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಈಗಾಗಲೇ ಜಿಲ್ಲಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಮತ್ತು ಅರಿವು ಮೂಡಿಸಲಾಗಿದೆ ಎಂದರು.

 ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲಾಗಿದೆ, ಜೊತೆಗೆ ಪೂರ್ವ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆಯನ್ನು ಬಲಗೊಳಿಸಲು ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶಗಳನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲು ಯೋಜನೆಯನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಅಂರ್ತಜಲಮಟ್ಟವನ್ನು ವೃದ್ಧಿಗೊಳಿಸಲು ಕಲ್ಯಾಣಿಗಳು, ಕರೆ-ಕುಂಟೆಗಳನ್ನು ಅಭಿವೃದ್ಧಿಗೊಳಿಸಿ ಬದುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

 ನರೇಗಾ ಯೋಜನೆಯಡಿ ಶಾಲಾ ಆವರಣ ಮತ್ತು ಸರ್ಕಾರಿ ಕಚೇರಿಗಳಲ್ಲಿ ಮಳೆ ನೀರು ಸಂರಕ್ಷಣೆ ಮಾಡಲು ಮಳೆನೀರು ಕೊಯ್ಲು ಪದ್ದತಿಯನ್ನು ಅಳವಡಿಸಿ ಮಳೆನೀರನ್ನು ಸಂರಕ್ಷಣೆ ಮಾಡಲಾಗಿದೆ. ಜೊತೆಗೆ ಇಂಗುಗುಂಡಿಗಳನ್ನು ನಿರ್ಮಿಸಿ ನೀರು ಇಂಗಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಟದ ಮೈದಾನಗಳನ್ನು ಅಭಿವೃದ್ಧಿಗೊಳಿಸಿ ಗಿಡ-ಮರಗಳನ್ನು ಉಳಿಸಿ ಗ್ರಾಮೀಣ ಪ್ರದೇಶದಲ್ಲಿ ಉದ್ಯಾನವನವನ್ನು ನಿರ್ಮಿಸಲಾಗಿದೆ ಎಂದರು.

 ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಪಿಡಿಓ ಶ್ರೀನಿವಾಸ್ ಹಾಜರಿದ್ದರು.