Sidlaghatta : ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ಜಾರಿ ಮತ್ತು ನೂತನ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾವ ಮಾಡದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತುಸಭೆ ಮಂಗಳವಾರ ನಡೆಯಲಿದ್ದು, ಅದಕ್ಕಾಗಿ ನಗರದಿಂದ ಸರ್ಕಾರಿ ನೌಕರರ ಸಂಘದ ಸದಸ್ಯರು ತೆರಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳಾದ ವೇತನ, ಭತ್ಯೆಗಳ ಪರಿಷ್ಕರಣಿ ಹಾಗೂ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಬಗ್ಗೆ ಯಾವುದೇ ಘೋಷಣಿಗಳನ್ನು ಸರ್ಕಾರವು ರಾಜ್ಯ ಆಯವ್ಯಯದಲ್ಲಿ ಪ್ರಸ್ತಾಪಿಸದೇ ಇರುವುದರಿಂದ ರಾಜ್ಯ ಸರ್ಕಾರಿ ನೌಕರರಲ್ಲಿ ನಿರಾಶೆ ಮೂಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಅದರಲ್ಲಿ ನಾವುಗಳು ಭಾಗವಹಿಸುತ್ತಿದ್ದೇವೆ. 2023-2024ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣಿ ಬಗ್ಗೆ ಪ್ರಸ್ತಾಪಿಸದಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟ ರೂಪುರೇಷೆಗಳ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಸಭೆ ಏರ್ಪಡಿಸಲಾಗಿದೆ ಎಂದು ಹೇಳಿದರು.
ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸ್ ನಾಯ್ಡು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಗೌರವಾಧ್ಯಕ್ಷ ಸಿಎಂ ಮುನಿರಾಜು, ಕಾರ್ಯದರ್ಶಿ ಅಕ್ಕಲರೆಡ್ಡಿ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಉಪಾಧ್ಯಕ್ಷ ವೆಂಕಟ ಶಿವಾರೆಡ್ಡಿ, ಕೆಂಪೇಗೌಡ, ಎಲ್.ವಿ.ವೆಂಕರೆಡ್ಡಿ, ಬೈರಾರೆಡ್ಡಿ, ಶಶಿಕುಮಾರ್, ಕಾತ್ಯಾಯಿನಿ ಹಾಜರಿದ್ದರು.