ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೊಳಿಸುವುದು, ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಒತ್ತಾಯಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿಡ್ಲಘಟ್ಟ ನಗರದ ಸರ್ಕಾರಿ ನೌಕರರ ಸಂಘದ ಆವರಣದಿದಂದ ಸರ್ಕಾರಿ ನೌಕರರೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಾರ್ಯಾಲಯದ ಮುಂಭಾಗ ಶಾಸಕ ವಿ.ಮುನಿಯಪ್ಪ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಸ್ತ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿದೆ. ರಾಜ್ಯಾಧ್ಯಂತ 183 ತಾಲ್ಲೂಕುಗಳಲ್ಲಿ ಶಾಖೆಗಳನ್ನು ಹೊಂದಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ವೇತನದ ನೆರವಿನ ಹಸ್ತ ನೀಡಲು ಸದಾ ಮುಂಚೂಣಿಯಲ್ಲಿರುವ ಮೂಲಕ ರಾಜ್ಯ ಸರ್ಕಾರ ರೂಪಿಸುವ ಜನಪರ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರು ಬದ್ದತೆಯಿಂದ ಕೆಲಸ ನಿರ್ವಹಿಸಿ ಸರ್ಕಾರಕ್ಕೆ ಕೀರ್ತಿ ತರುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಇಂತಹ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಸರಿಮಾನವಾದ ವೇತನ ಹಾಗೂ ಭತ್ಯೆಗಳನ್ನು ನೀಡಬೇಕು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ನೀತಿಯನ್ನೇ ಮುಂದುವರೆಸಬೇಕು. ಪ್ರಾಥಮಿಕ, ಪ್ರೌಡಶಾಲೆ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಶೀಘ್ರ ಈಡೇರಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡುವುದು ಸೇರಿದಂತೆ ಸರ್ಕಾರಿ ನೌಕರರಿಗೆ ಸಹಕಾರ ನೀಡುವಂತೆ ಕೋರಿ ಶಾಸಕ ವಿ.ಮುನಿಯಪ್ಪರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಾಸಕ ವಿ.ಮುನಿಯಪ್ಪ ಮಾತನಾಡಿ, ಈಚೆಗೆ ನಡೆದ ಬೆಳಗಾವಿ ಅಧಿವೇಶನಕ್ಕೂ ಮುನ್ನ ಈ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದೇ ಆಗಿದ್ದಲ್ಲಿ ಅಧಿವೇಶನದಲ್ಲಿಯೇ ಈ ಚರ್ಚಿಸುವ ಪ್ರಯತ್ನ ಮಾಡುತ್ತಿದ್ದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಅನುಷ್ಟಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಚಂದ್ರಕಾಂತ್, ಶಿರಸ್ತೇದಾರ್ ಕೆ.ಎನ್.ಮಂಜುನಾಥ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಕ್ಕಲರೆಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ಮುನಿರಾಜು, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ವಿವಿಧ ಇಲಾಖೆಗಳ ಅಧಿಕಾರಿ, ನೌಕರರು ಹಾಜರಿದ್ದರು.