Home News ಶಾಲಾ ಪ್ರಾರಂಭೋತ್ಸವ ಹಾಗೂ ಬಿಸಿಯೂಟಕ್ಕೆ ಚಾಲನೆ

ಶಾಲಾ ಪ್ರಾರಂಭೋತ್ಸವ ಹಾಗೂ ಬಿಸಿಯೂಟಕ್ಕೆ ಚಾಲನೆ

0
Government School reopen and mid day meals

Kundalagurki, Sidlaghatta : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹಲವಾರು ಸರ್ಕಾರಿ ಶಾಲೆಗಳು ಸಾಕಷ್ಟು ಉತ್ತಮ ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿವೆ. ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆಯು ಮಾದರಿಶಾಲೆಯಾಗಿ ಅಭಿವೃದ್ಧಿಯಾಗಿದ್ದು ಉತ್ತಮ ಕಲಿಕಾಪರಿಸರವನ್ನು ಹೊಂದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲಮಾಧ್ಯಮ ವಿಭಾಗಗಳನ್ನು ಆರಂಭಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಉತ್ತೇಜನ ನೀಡಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ, ನೋಟ್‌ಪುಸ್ತಕ, ಲೇಖನಸಾಮಗ್ರಿಗಳ, ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತಸೌಕರ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸುವುದಲ್ಲದೇ ಗುಣಾತ್ಮಕಶಿಕ್ಷಣಕ್ಕೆ ಗಮನಕೊಡಲಾಗುವುದು. ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆಯು ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಹೆಚ್ಚು ಅಂಕಪಡೆದು ರಾಜ್ಯಮಟ್ಟದ ಟಾಪರ್ ಹೊರಹೊಮ್ಮಲು ಶಿಕ್ಷಕರು ಶ್ರಮಿಸಬೇಕು ಎಂದರು.

ಉಚಿತ ನೋಟ್‌ಪುಸ್ತಕ: ಜಯಪ್ರಕಾಶ್ ನಾರಾಯಣ್ ಮತ್ತು ಎಚ್‌.ಡಿ.ಡಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಸುಮಾರು 12 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕ, ಲೇಖನಸಾಮಗ್ರಿಗಳನ್ನು ವಿತರಿಸುತ್ತಿರುವುದಾಗಿ ಅವರು ತಿಳಿಸಿದರು.

ಕ್ಷೇತ್ರಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯವಿದ್ದು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಗ್ರಾಮೀಣಬಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪೋಷಕರು ಗಮನಹರಿಸಬೇಕು ಎಂದರು.

ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 86 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ನೋಟ್‌ಪುಸ್ತಕ, ಸಮವಸ್ತ್ರ, ಲೇಖನಸಾಮಗ್ರಿಗಳನ್ನು ವಿತರಿಸಲಾಯಿತು.

ಮುಖಂಡರಾದ ಬಂಕ್‌ಮುನಿಯಪ್ಪ, ತಾದೂರ್ ರಘು, ಗ್ರಾಮಪಂಚಾಯಿತಿ ಅಧ್ಯಕ್ಷರಾದ ಮೇಲೂರು ಉಮೇಶ್, ಗಾಯಿತ್ರಮ್ಮ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲ್ಲೂಕುಪಂಚಾಯಿತಿ ಇಒ ಮುನಿರಾಜು, ಗ್ರಾಮಪಂಚಾಯಿತಿ ಸದಸ್ಯ ಮುನಿರಾಜು, ರಮೇಶ್‌ರೆಡ್ಡಿ, ಗಂಗಯ್ಯ, ಅಕ್ಷರದಾಸೋಹ ಸಹಾಯಕ ಶಿಕ್ಷಣಾಧಿಕಾರಿ ಆಂಜನೇಯ, ಮುಖ್ಯಶಿಕ್ಷಕ ಎಲ್.ವಿ.ವೆಂಕಟರೆಡ್ಡಿ, ಬಿಆರ್‌ಸಿ ಸಂಯೋಜಕ ತ್ಯಾಗರಾಜು, ಶಿಕ್ಷಣಸಂಯೋಜಕ ಭಾಸ್ಕರಗೌಡ, ಚಂದ್ರಶೇಖರ್, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಲಕ್ಷ್ಮಿ, ಬೋಧಕವರ್ಗದವರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version