ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಪಕ್ಷಗಳ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ 177 ಕ್ಷೇತ್ರಗಳಿದ್ದು 374 ಗ್ರಾಮ ಪಂಚಾಯಿತಿ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆಗೆ ಯಾವುದೇ ರೀತಿಯ ಗೊಂದಲವಿಲ್ಲದೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಂಚಾಯಿತಿಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರೆಬೇತಿ ನೀಡಲಾಗಿದೆ ಎಂದರು. ಚುನಾವಣೆಗೆ 177 ಮತಗಟ್ಟೆಗಳು ಹೆಚ್ಚುವರಿಯಾಗಿ 25 ಮತಗಟ್ಟೆಗಳ ಸಹಿತ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಈ ಚುನಾವಣೆಯಲ್ಲಿ 59 ಸಾವಿರ 335 ಪುರುಷರು, 58 ಸಾವಿರದ 425 ಮಹಿಳೆಯರು ಸಹಿತ 1 ಲಕ್ಷ 17 ಸಾವಿರ 766 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಗ್ರಾಮ ಪಂಚಾಯಿತಿಯ ಚುನಾವಣೆಗೆ ಆಯಾ ಗ್ರಾಮ ಪಂಚಾತಿಯಿಯ ಚುನಾವಣಾಧಿಕಾರಿಗಳು ಡಿಸೆಂಬರ್ 7 ರಿಂದ 11ತನಕ ನಾಮ ಪತ್ರಗಳನ್ನು ಸ್ವೀಕರಿಸಲಿದ್ದು, ಡಿಸೆಂಬರ್ 12ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಮತ್ತು 14 ರಂದು ಉಮ್ಮೇದುವಾರಿಕೆಯನ್ನು ವಾಪಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 22ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು ಡಿಸೆಂಬರ್ 30ರಂದು ಶಿಡ್ಲಘಟ್ಟ ನಗರದ ಸರ್ಕಾರಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು ಸಾರ್ವಜನಿಕರು 08158-256763 ಸ್ಥಿರ ದೂರವಾಣಿಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದಾಗಿದೆ ಜೊತೆಗೆ ತಾಲೂಕು ಮಟ್ಟದಲ್ಲಿ ಎಂಸಿಸಿ ತಂಡ ಸಹ ಸಕ್ರೀಯವಾಗಿ ಕಾರ್ಯನಿರ್ವಹಿಸಲಿದೆ ಎಂದು ವಿವರ ನೀಡಿದರು.
ಈ ಸಂದರ್ಭದಲ್ಲಿ ಚುನಾವಣೆ ಶಾಖೆಯ ಸಾದಿಕ್‍ಪಾಷ ಹಾಜರಿದ್ದರು.