ದೇಶದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರ ತತ್ವಾದರ್ಶಗಳನ್ನು ನಂಬಿ ರಾಜಕೀಯ ಮಾಡಲು ಬಂದಿದ್ದೇವೆಯೇ ಹೊರತು ಯಾವುದೇ ಸ್ವಾರ್ಥ ರಾಜಕಾರಣ ಮಾಡಲು ಅಲ್ಲ ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಹೇಳಿದರು.
ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ಜಂಗಮಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಸಂಘಟನಾ ಪೂರ್ವಸಿದ್ದತೆ ಸಭೆಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಕೆಲ ಕಿಡಿಗೇಡಿಗಳು ನಮ್ಮ ಬಗ್ಗೆ ಹರಡಿಸಿರುವ ಸುಳ್ಳು ಸುದ್ದಿಗಳಿಗೆ ಯಾರೂ ಕಿವಿ ಕೊಡಬಾರದು. ಜೆಡಿಎಸ್ ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿ ಫಾರಂ ನೀಡಿದ್ದಂತಹ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸುವುದಿಲ್ಲ. ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದರು.
ಕ್ಷೇತ್ರದ ಅಭಿವೃದ್ದಿ ಸೇರಿದಂತೆ ಪಾರದರ್ಶಕ ಆಡಳಿತಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಆಯ್ಕೆ ಮಾಡುವ ಜೊತೆಗೆ ಪಂಚಾಯಿತಿಗಳು ಜೆಡಿಎಸ್ ವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಮುಖಂಡರು ಸೇರಿದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆಯಾ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಜೊತೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯ ಆಯ್ಕೆಗೆ ಶ್ರಮಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ರಾಮಯ್ಯ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಎಂ.ಗೋಪಾಲ್, ಮುಖಂಡರಾದ ಗುಡಿಹಳ್ಳಿ ಮುನಿವೆಂಕಟಸ್ವಾಮಿ, ತಾದೂರು ರಘು, ಮೇಲೂರು ಮಂಜುನಾಥ್, ಶ್ರೀನಿವಾಸಗೌಡ, ಎಚ್.ಜಿ.ಶಶಿಕುಮಾರ್ ಹಾಜರಿದ್ದರು.