Kannapanahalli, Sidlaghatta : ಸರ್ಕಾರ, ಸಾರ್ವಜನಿಕ ಹಾಗೂ ಸಮುದಾಯಕ್ಕಾಗಿ ಮೀಸಲಿಟ್ಟ ಯಾವುದೇ ಜಾಗವನ್ನು ಯಾರೂ ಒತ್ತುವರಿ ಮಾಡಬಾರದು. ಒತ್ತುವರಿ ಮಾಡಿದ್ದೇ ಆದಲ್ಲಿ ನಿರ್ದಾಕ್ಷಿಣ್ಯವಾಗಿ ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದರು.
ಶಿಡ್ಲಘಟ್ಟ ತಾಲ್ಲೂಕಿನ ಪಲ್ಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ನಪನಹಳ್ಳಿ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಸ್ಥಳ ಸೇರಿದಂತೆ ಗ್ರಾಮದ ಕೆರೆ, ಕುಂಟೆಗಳೆಲ್ಲವು ಇರುವುದು ನಮಗಾಗಿ ಕೆರೆ, ಕುಂಟೆ ಸಂರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಗ್ರಾಮದವರೇ ಒತ್ತುವರಿ ಮಾಡಿ ಗ್ರಾಮದವರೇ ಒತ್ತುವರಿ ತೆರವುಗೊಳಿಸಿ ಎಂದು ನಮಗೆ ಅರ್ಜಿ ಹಾಕುವ ಅದೆಷ್ಟೋ ಪ್ರಕರಣಗಳು ನಾವು ಕಂಡಿದ್ದೇವೆ. ಹಾಗಾಗಿ ಯಾರೊಬ್ಬರೂ ಸರ್ಕಾರಿ ಸ್ಥಳಗಳ ಒತ್ತುವರಿಗೆ ಮುಂದಾಗಬಾರದು. ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗ್ರಾಮಗಳು ಅಭಿವೃದ್ಧಿಯಾಗಲು ಸ್ವಚ್ಛತೆ ಅತ್ಯಗತ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು. ಗ್ರಾಮೀಣ ಭಾಗದ ಜನತೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಯಾವುದೇ ಮಗು ಮೂಲ ಶಿಕ್ಷಣದಿಂದ ಹೊರಗುಳಿಯಬಾರದು ಎಂದು ಸರ್ಕಾರವು ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. ಜೊತೆಗೆ ಆರೋಗ್ಯ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಗಳು ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಸರ್ಕಾರವು ಸಾಕಷ್ಟು ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ವಿವಿಧ ಇಲಾಖೆಗಳಿಂದ ತೆರಯಲ್ಪಟ್ಟ ಕೃಷಿ, ತೋಟಗಾರಿಕೆ, ರೇಷ್ಮೆ ವಸ್ತುಪ್ರದರ್ಶನ ಮಳಿಗೆಗಳು, ಆರೋಗ್ಯ ಶಿಬಿರ ಮಳಿಗೆ, ಆರೋಗ್ಯ ತಪಾಸಣೆ ಹಾಗೂ ಔಷಧಿಗಳ ವಿತರಣೆ, ಸೇರಿದಂತೆ ಇತರೆ ಎಲ್ಲಾ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ವಿವಿಧ ಯೋಜನೆಗಳಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.
ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಮುನಿರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸಿಡಿಪಿಓ ನೌತಾಜ್, ಬಿಸಿಎಂ ಅಧಿಕಾರಿ ನಾರಾಯಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ, ಗ್ರಾಮಪಂಚಾಯಿತಿ ಅಧ್ಯಕ್ಷೆ ರಾಮಕ್ಕ, ಉಪಾಧ್ಯಕ್ಷ ಜಿ.ರಾಮಚಂದ್ರರೆಡ್ಡಿ, ಸದಸ್ಯರು, ಗ್ರಾಮದ ಲಕ್ಷ್ಮಿನಾರಾಯಣ, ದೇವರಾಜ್, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಹಾಜರಿದ್ದರು.