ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಭೂ ಸುದಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯನ್ನು ವಿರೋಧಿಸಿ ಸೆಪ್ಟೆಂಬರ್ 28 ರ ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡುವಂತೆ ವಿವಿಧ ಸಂಘಟನೆಯ ಮುಖಂಡರು ಮನವಿ ಮಾಡಿದರು.
ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕಿನಲ್ಲಿ ಸಂಪೂರ್ಣ ಬಂದ್ ಮಾಡುವ ಮೂಲಕ ವರ್ತಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುದಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಮಸೂದೆ ಇವುಗಳನ್ನು ಸುಗ್ರೀವಾಜ್ಞೆ ಮೂಲಕ ಕೃಷಿಕರು ಹಾಗೂ ಕೃಷಿ ಕೂಲಿ ಕೆಲಸಗಾರರ ಮೇಲೆ ಮರಣ ಶಾಸನವನ್ನು ಬರೆಯಲು ಹೊರಟಿದೆ ಎಂದರು.
ಅಲ್ಲದೆ ಸೆಪ್ಟೆಂಬರ್ 28 ರಂದು ಕರ್ನಾಟಕ ರಾಜ್ಯ ರೈತ ಸಂಘ ಸಹಯೋಗದೊಂದಿಗೆ ಕರ್ನಾಟಕ ದಲಿತಪರ ಸಂಘಟನೆಗಳು, ಕೃಷಿ ಕಾರ್ಮಿಕರು, ದಲಿತ ಸಂಘರ್ಷ ಸಮಿತಿ,.ಕರ್ನಾಟಕ ರಕ್ಷಣಾ ವೇದಿಕೆ, ಯೂನಿಟಿ ಸಿಲ್ ಸಿಲಾ, ಸಿ.ಐ.ಟಿ.ಯು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲಿಸಿದ್ದು ಸೋಮವಾರದ ಸಂಪೂರ್ಣ ಬಂದ್ ಗೆ ಎಲ್ಲರೂ ಸಹ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುನಿಕೆಂಪಣ್ಣ, ಚನ್ನೇಗೌಡ, ಪ್ರತೀಶ್, ಶ್ರೀಧರ್, ಶ್ರೀನಿವಾಸ, ವೆಂಕಟೇಶ, ನಾಗರಾಜು, ಮಂಜುನಾಥ್, ಮುನಿಲಕ್ಷ್ಮಮ್ಮ, ಅಸದ್, ಮಂಜುಳಮ್ಮ, ನಾಗರತ್ನಮ್ಮ ಹಾಜರಿದ್ದರು.