Sidlaghatta : ಮಹನೀಯರ ಜಯಂತಿಗಳು ಕೇವಲ ಆಡಂಬರ, ಅದ್ದೂರಿಯ ಸಂಕೇತವಾಗಬಾರದು, ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಆಚರಣೆ ಆಗಬೇಕೆಂದು ನಾಡ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರೂ ಆದ ತಹಶೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೆ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಬೇಕಿದೆ. ಈ ಜಗತ್ತಿನಲ್ಲಿ ಶಿಕ್ಷಣವೊಂದೆ ಉತ್ತಮ ಬದುಕನ್ನು ರೂಪಿಸಲು ಇರುವ ಏಕೈಕ ಉತ್ತಮ ಮಾರ್ಗ, ಹಾಗಾಗಿ ಎಲ್ಲ ಸಮುದಾಯದವರೂ ಸಹ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸುವಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಿಂದೆ ಬೀಳುತ್ತಿದ್ದಾರೆ. ಹಾಗಾಗಿ ಇದೀಗ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಈಗಿನಿಂದಲೆ ತರಬೇತಿ ಮಾರ್ಗದರ್ಶನ ನೀಡುವಂತ ಕೆಲಸ ಆಗಬೇಕಿದೆ.
ಇದಕ್ಕೆ ಅಗತ್ಯವಾದ ಸ್ಪರ್ಧಾ ಪುಸ್ತಕಗಳಿಗೆ ಪ್ರತಿ ವಿದ್ಯಾರ್ಥಿಗೆ ಮೂರು ವರ್ಷಗಳ ಮಟ್ಟಿಗೆ 1800 ರೂ ವೆಚ್ಚ ತಗುಲಲಿದೆ. ಅದರ ವೆಚ್ಚವನ್ನು ಭರಿಸುವ ಮೂಲಕ ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎನ್ನುವ ತಹಶೀಲ್ದಾರರ ಅಭಿಪ್ರಾಯಕ್ಕೆ ಸಭೆಯಲ್ಲಿ ಎಲ್ಲರೂ ಸಹಮತ ವ್ಯಕ್ತಪಡಿಸಿದರು.
ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ವೇದಿಕೆಯಲ್ಲಿದ್ದರು. ಒಕ್ಕಲಿಗ ಸಮುದಾಯದ ಮುಖಂಡರು, ನಾನಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.