Sidlaghatta : Kolar ಮೀಸಲು ಲೋಕಸಭಾ ಕ್ಷೇತ್ರದ Congress ಅಭ್ಯರ್ಥಿ ಗೌತಮ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದು, ಶಿಡ್ಲಘಟ್ಟದಿಂದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಕೆ ನಂತರ ನಡೆದ ರೋಡ್ ಶೋದಲ್ಲಿ ಭಾಗವಹಿಸಿದ್ದರು.
ಕೋಲಾರದ ಜಿಲ್ಲಾ ಆಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೌತಮ್ ಅವರು ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿಕೆ ವೇಳೆ ಸಚಿವ ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಶಾಸಕರಾದ ನಂಜೇಗೌಡ, ರೂಪಕಲಾ ಶಶಿಧರ್, ಕೊತ್ತೂರು ಮಂಜುನಾಥ್, ಅನಿಲ್‌ಕುಮಾರ್, ಎಐಸಿಸಿ ಅಭಿಷೇಕ್ ದತ್, ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಇನ್ನಿತರರು ಜೊತೆಯಲ್ಲಿದ್ದರು.
ನಾಮ ಪತ್ರ ಸಲ್ಲಿಸಿದ ನಂತರ ಕೋಲಾರ ನಗರದಲ್ಲಿನ ಬಂಗಾರಪೇಟೆ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಿ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶಿಸಿದರು.
ರೋಡ್ ಶೋ ನಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಶಾಸಕರಾದ ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್, ಶಿಡ್ಲಘಟ್ಟದ ಮಾಜಿ ಸಚಿವ ವಿ.ಮುನಿಯಪ್ಪ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮುಂತಾದ ಹಲವು ಪ್ರಮುಖ ನಾಯಕರು ಭಾಗಿಯಾದರು.
ರೋಡ್ ಶೋಗೂ ಮುನ್ನ ನಾಮಪತ್ರ ಸಲ್ಲಿಕೆ ನಂತರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಗೌತಮ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಯುವ ನಾಯಕರು, ಉತ್ಸಾಹಿ ಯುವ ನಾಯಕ ಗೌತಮ್ ಅವರನ್ನು ನಾವೆಲ್ಲರೂ ಸೇರಿ ಗೆಲ್ಲಿಸುವ ಕೆಲಸ ಮಾಡಲಿದ್ದೇವೆ.
ಕೋಲಾರ ಮಾತ್ರವಲ್ಲದೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆ ನಮ್ಮದಾಗಿದೆ. ವಿಶೇಷವಾಗಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಕೆಲಸವನ್ನು ನಾವೆಲ್ಲರೂ ಒಟ್ಟಾಗಿ ಮಾಡಲಿದ್ದೇವೆ ಎಂದರು.
ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಾತನಾಡಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರು ನಾಮಪತ್ರ ಸಲ್ಲಿಸುವ ವೇಳೆ ಶಿಡ್ಲಘಟ್ಟದಿಂದ ಒಂದು ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ.
ಕೋಲಾರ ಮೀಸಲು ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಈ ಭಾರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರು ಅತಿ ಹೆಚ್ಚಿನ ಮತಗಳ ಅಂತರದಿಂದ ವಿಜಯ ಸಾಧಿಸುವುದು ಶತಸಿದ್ದ ಎಂದು ಭವಿಷ್ಯ ನುಡಿದರು.