Sidlaghatta : ಹಿಂದುಳಿದ, ಶ್ರಮಜೀವಿ ವರ್ಗಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಪ್ರಮುಖರು. ಆಧ್ಯಾತ್ಮಿಕ ಪ್ರವೃತ್ತಿಯ ಮೂಲಕ, ಜನರಲ್ಲಿ ಭಕ್ತಿಪ್ರಧಾನ ಚಿಂತನೆಗಳನ್ನು ತುಂಬಿಸಿದ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಮಡಿವಾಳ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶರಣರ ವಚನಸಾಹಿತ್ಯದ ರಕ್ಷಣೆಗಾಗಿ ಹೋರಾಡಿದ ಮಾಚಿದೇವರ ಜಯಂತಿಯನ್ನು ಎಲ್ಲೆಡೆ ಶ್ರದ್ಧೆಯಿಂದ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಡಿವಾಳ ಸಮಾಜದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕಿದೆ. ಕ್ಷೇತ್ರದ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಹಾಗು ಆರೋಗ್ಯ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಈಗಾಗಲೇ ತಾವು ಶ್ರಮಿಸುತ್ತಿದ್ದು ಇದಕ್ಕೆ ಪ್ರತಿಯೊಬ್ಬ ಪೋಷಕರ ಸಹಕಾರ ಅತ್ಯಗತ್ಯ ಎಂದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ಮಡಿವಾಳ ಮಾಚಿದೇವ ಪ್ರಮುಖರು ಎಂದರು.
ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಸಿಡಿಪಿಓ ನವತಾಜ್, ನಗರಠಾಣೆ ಪಿಎಸ್ಸೈ ವೇಣುಗೋಪಾಲ್, ಶ್ರೀ ಮಡಿವಾಳ ಮಾಚಿದೇವ ಯುವಕರ ಸಂಘದ ಅಧ್ಯಕ್ಷ ಡಿ.ವಿ.ಕೃಷ್ಣಪ್ಪ, ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಚ್.ಎಂ.ಮುನಿರಾಜು, ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.