Malamachanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ, ಈ ತಿಮ್ಮಸಂದ್ರ, ತಿಮ್ಮನಾಯಕನಹಳ್ಳಿ ಹಾಗೂ ನಾಗಮಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗ್ರಾಪಂಯ ದೂರದೃಷ್ಟಿಯ ಯೋಜನೆ, ಗ್ರಾಮ ಪಂಚಾಯಿತಿ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲ ಯೋಜನೆ, ಗ್ರಾಮ ಪಂಚಾಯಿತಿ ಶಿಕ್ಷಣ ಯೋಜನೆ, ಆರೋಗ್ಯ ಯೋಜನೆ, ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸುರಕ್ಷತೆ ಯೋಜನೆ, ಬಡತನ ಮುಕ್ತ ಜೀವನೋಪಾಯ ಮತ್ತು ಕೌಶಲ್ಯಾಭಿವೃದ್ದಿ ಯೋಜನೆ ಹಾಗೂ ಗ್ರಾಮ ಪಂಚಾಯಿತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಕ್ರಿಯಾ ಯೋಜನೆಯ ತಯಾರಿಕೆ, ಸದಸ್ಯರ ಜವಬ್ದಾರಿ ಮತ್ತು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಮೂರು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಮಾತನಾಡಿ, 5 ವರ್ಷಗಳ ದೂರದೃಷ್ಟಿಯ ಯೋಜನೆ ಕುರಿತು ಮಾಹಿತಿ ನೀಡುವ ಸಲುವಾಗಿ ನಡೆಯುತ್ತಿರುವ ತರಬೇತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಕಡ್ಡಾಯವಾಗಿ ಭಾಗವಹಿಸಿ ಉತ್ತಮವಾದ ಈ ಯೋಜನೆಯನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸಹಕರಿಸಬೇಕೆಂದರು.
ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣಪ್ಪ, ಮಂಜುನಾಥ್, ಅಬ್ಲೂಡು ಎಸ್.ಭಾರತಿ, ನರಸಿಂಹಮೂರ್ತಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಸದಸ್ಯರ ಜವಾಬ್ದಾರಿ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾಗಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದಸ್ಯರು ಸರ್ಕಾರದಿಂದ ದೊರೆಯುವ ತರಬೇತಿಯನ್ನು ಪಡೆದುಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಬಿಎಲ್ ಲೋಕೇಶ್, ಪಿಡಿಒ ಶೈಲಾ, ಕಾರ್ಯದರ್ಶಿ ರಾಜಣ್ಣ, ನಾಗಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನಕೃಷ್ಣಪ್ಪ, ಉಪಾಧ್ಯಕ್ಷೆ ಆಂಜಿನಮ್ಮ, ಪಿಡಿಒ ನಯನಾ ನಿಖತ್ ಆರಾ, ನಾಗಮಂಗಲದ ತಮ್ಮಣ್ಣ, ಈ ತಿಮ್ಮಸಂದ್ರ ಗ್ರಾಪಂಯ ಅಧ್ಯಕ್ಷೆ ಶಾಂತಮ್ಮ, ಪಿಡಿಒ ತನ್ವೀರ್ ಅಹಮದ್, ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪ್ರಭಾವತಮ್ಮ, ಪಿಡಿಒ ಶ್ರೀನಿವಾಸಪ್ಪ, ತಾಲ್ಲೂಕು ಪಂಚಾಯಿತಿಯ ಮಂಜುಳಮ್ಮ ಹಾಗೂ 4 ಗ್ರಾಮ ಪಂಚಾಯಿತಿಗಳ ಸದಸ್ಯರು ತರಬೇತಿಯಲ್ಲಿ ಭಾಗವಹಿಸಿದ್ದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಇಲಾಖೆಯ ಯೋಜನೆಗಳು ಮತ್ತು ಸರ್ಕಾರದ ಮಾರ್ಗಸೂಚಿಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.