ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸಾಮಾನ್ಯ ಸೇವಾ ಸಿಂಧು ಕೇಂದ್ರವನ್ನು ಉದ್ಘಾಟಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯಗಳು ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಸುಲಭವಾಗಿ ಸಿಗುವಂತಾಗಲಿ ಎಂಬ ಸದುದ್ದೇಶದಿಂದ ಮೇಲೂರಿನ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಕಚೇರಿಯಲ್ಲಿ ಸಾಮಾನ್ಯ ಸೇವಾ ಸಿಂಧು ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಧರ್ಮಸ್ಥಳ ಸಂಸ್ಥೆಯ ನೂರಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಗಮನಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಅನುಷ್ಟಾನ ಮಾಡುವ ಮಹತ್ತರ ಜವಾಬ್ದಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರ ನೀಡಿದೆ. ಸೇವಾ ಕೇಂದ್ರದ ನಿರ್ವಹಣೆ ಮಾಡುವವರು ಗ್ರಾಮೀಣ ಜನರಿಗೆ ಮಾರ್ಗದರ್ಶಕರಾಗಬೇಕು, ಸರ್ಕಾರದ ಸವಲತ್ತುಗಳನ್ನು ವಿವರಿಸಬೇಕು. ಸುಮಾರು 700 ರೀತಿಯ ಸೌಲಭ್ಯಗಳನ್ನು ನೀಡಲು ಅವಕಾಶವಿದ್ದು, ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದರು.
ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, “ಜನ ಸಾಮಾನ್ಯರು ವಿವಿಧ ಧಾಖಲೆಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಕೇಂದ್ರ ಸರ್ಕಾರದ “ಸೇವಾ ಸಿಂಧು ಕೇಂದ್ರ”ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಾರಂಭ ಮಾಡುತ್ತಿದ್ದೇವೆ. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 31 ಕೇಂದ್ರಗಳನ್ನು ತೆರೆಯುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವುದೇ ಮುಖ್ಯ ಉದ್ದೇಶವಾಗಿದೆ. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಧರ್ಮೇಂದ್ರ, ಮಂಜುನಾಥ್, ಬಚ್ಚೇಗೌಡ, ಮೇಲ್ವಿಚಾರಕರಾದ ಅನಿತಾ, ಸುರೇಶ್, ಗಣಕ ಯಂತ್ರ ಸಂಯೋಜಕಿ ಹರ್ಷಿತಾ, ಸೇವಾಪ್ರತಿನಿಧಿಗಳಾದ ಚೈತ್ರ. ಪದ್ಮ, ನೇತ್ರಾವತಿ, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.