ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಶ್ರೀ ಬಾಲಾಜಿ ಕನ್ವೆಂಷನ್ ಹಾಲ್ ನಲ್ಲಿ ಶಿಡ್ಲಘಟ್ಟ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಕೊರೊನಾ ಸೇನಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ “ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ” ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿದರು.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹೊರತುಪಡಿಸಿ ಸಂಸದೀಯ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾದ ಪತ್ರಿಕಾ ರಂಗ ತನ್ನ ಕಾರ್ಯವನ್ನು ಸಕ್ರಿಯವಾಗಿ ಮಾಡುತ್ತಿದೆ. ಪ್ರಸ್ತುತ ತಂತ್ರಜ್ಞಾನದ ವೇಗದ ಯುಗದಲ್ಲಿ ಪತ್ರಿಕಾ ರಂಗದ ಹೊಣೆಗಾರಿಕೆ ಹೆಚ್ಚಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಪ್ರಾದೇಶಿಕ ಭಾಷೆಯ ಪತ್ರಿಕೆಗಳಿಗೆ ಆಧ್ಯತೆ ನೀಡಬೇಕು. ತಂತ್ರಜ್ಞಾನದ ಪರಿಣಾಮ ಕ್ಷಣ ಮಾತ್ರದಲ್ಲಿ ಅಂಗೈಯಲ್ಲಿ ಸುದ್ದಿ ಸಿಗುತ್ತಿದೆ. ಪತ್ರಕರ್ತರು ಜನರ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕು. ಹಳ್ಳಿಗಳಿಗೆ ಹೋಗಬೇಕು. ಸರ್ಕಾರದ ಯೋಜನೆಗಳು ಏನಾಗಿವೆ. ಜನರಿಗೆ ತಲುಪಿವೆಯೇ, ಎನ್ನುವ ಕುರಿತು ಪರಿಶೀಲನೆಯಾಗಬೇಕು. ಇದರಿಂದ ಸರ್ಕಾರದ ಬಜೆಟ್ ತಯಾರಿಕೆ ಅನುಕೂಲವಾಗುತ್ತದೆ ಎಂದರು.
ಪತ್ರಿಕಾ ವೃತ್ತಿಯ ಕುರಿತು ವಿಶೇಷ ಉಪನ್ಯಾಸ ನೀಡಿದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ಗೋಪಿನಾಥ್ ಮಾತನಾಡಿ, ಪತ್ರಕರ್ತರು, ತಮ್ಮ ವೃತ್ತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪತ್ರಿಕಾ ವೃತ್ತಿ ಎಂದು ಕರೆಯಲ್ಪಡುತ್ತಿದ್ದದ್ದು ಇದೀಗ ಉದ್ಯಮವಾಗಿದೆ. ಪತ್ರಕರ್ತರು ತಮ್ಮ ಮೌಲ್ಯಗಳನ್ನು, ನೈತಿಕತೆಯನ್ನು ಉಳಿಸಿಕೊಳ್ಳಬೇಕಾಗಿದೆ. ಜನರ ಸಮಸ್ಯೆಗಳಿಗೆ ಹೆಚ್ಚಿನ ಗಮನ ಹರಿಸಬೇಕು. ಸಮಾಜದ ಮತ್ತು ಜನಪ್ರತಿನಿಧಿಗಳ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕಾಗಿದೆ. ಓದುಗರಿಗೆ ನ್ಯಾಯ ಒದಗಿಸಬೇಕು. ವೃತ್ತಿಯ ಘನತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ನೂರು ಮಂದಿ ಕೊರೊನಾ ಸೇನಾನಿಗಳಿಗೆ ಸನ್ಮಾನ ನಡೆಯಿತು.
ಶಾಸಕ ವಿ.ಮುನಿಯಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ಮಾಜಿ ಶಾಸಕ ಎಂ.ರಾಜಣ್ಣ, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ತಹಶೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್, ಪೌರಾಯುಕ್ತ ಶ್ರೀಕಾಂತ್, ಎಬಿಡಿ ಗ್ರೂಪ್ ಅಧ್ಯಕ್ಷ ರಾಜೀವ್ ಗೌಡ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಿ.ಸಿ.ನಂದೀಶ್, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುರೇಂದ್ರಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ. ನಾಗರಾಜ್, ರೈತ ಸಂಘದ ವೆಂಕಟಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಕಬಾಡೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೆಂಕಟೇಶ್, ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ರಾಧಾಕೃಷ್ಣ, ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಕೆ.ವಿ.ಮುನೇಗೌಡ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi